ಕಡಬ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿ, ಆಕೋಟತ್ತಡ್ಕದಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಮೃತ ಯುವಕನನ್ನು ಚೇತನ್ ಎಂದು ಗುರುತಿಸಲಾಗಿದೆ. ಇವರು ಪದವಿ ಶಿಕ್ಷಣ ಪೂರ್ಣಗೊಳಿಸಿ ಮನೆ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಇತ್ತೀಚಿನ ಎರಡು ವರ್ಷಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಪುತ್ತೂರಿನ ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ.
ಘಟನೆ ದಿನ ಬೆಳಿಗ್ಗೆ ತಾಯಿ ಎಂ.ಬಿ. ಲಿಸಿ (59) ಕೆಲಸದ ನಿಮಿತ್ತ ಮನೆಯಿಂದ ತೆರಳಿದ್ದು, ಮಧ್ಯಾಹ್ನ ಮಗನಿಗೆ ಕರೆ ಮಾಡಿದಾಗ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಕಾರ್ಮಿಕ ಲೋಕೇಶ್ ಆಚಾರಿಗೆ ಮಾಹಿತಿ ನೀಡಿದ್ದರು. ಅವರು ಕೋಣೆಯೊಳಗೆ ನೋಡಿದಾಗ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕ ಪತ್ತೆಯಾಗಿದ್ದಾನೆ ಎನ್ನಲಾಗಿದೆ.
ತಕ್ಷಣ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ಚೇತನ್ ಮೃತ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 34/2025, ಕಲಂ 194(3) ಬಿಎನ್‌ಎಸ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.




























