ಕುಂದಾಪುರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಬದಿಯಲ್ಲಿದ್ದ ಚರಂಡಿಗೆ ಪಲ್ಟಿಯಾದ ಘಟನೆ ತೆಕ್ಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ–66ರ ಕನ್ನುಕೆರೆ ಎಂಬಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರು ಮಹಾರಾಷ್ಟ್ರದ ಪುಣೆಯ ಲಾ ಕಾಲೇಜು ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.
ಮಧ್ಯಾಹ್ನದ ವೇಳೆಗೆ ತೆಕ್ಕಟ್ಟೆ ಸಮೀಪದ ಕನ್ನುಕೆರೆ ಪ್ರದೇಶದಲ್ಲಿ ಕಾರು ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ಹಾರಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಕಾರು ಪಲ್ಟಿ ಹೊಡೆದು ಬಿದ್ದಿದೆ. ಅಪಘಾತ ಸಂಭವಿಸಿದ ವೇಳೆಗೆ ಕಾರಿನಲ್ಲಿ ಚಾಲಕ ಸೇರಿದಂತೆ ಆರು ಮಂದಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಿದ್ದಾರೆ.
ಘಟನಾ ಸ್ಥಳಕ್ಕೆ ಕೋಟ ಪೊಲೀಸ್ ಠಾಣಾಧಿಕಾರಿ ಪ್ರವೀಣ್ ಕುಮಾರ್ ಆರ್. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


























