ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಫೆ.28ರಂದು ವರದಿಯಾಗಿದೆ.
ಮೃತ ಬಾಲಕಿ ಬೆಟ್ಟತ್ತೂರು ಗ್ರಾಮದ ಗಿರೀಶ್ ಅವರ ಪುತ್ರಿ ಪೂಜಾ (17) ಎಂದು ಗುರುತಿಸಲಾಗಿದೆ. ಮಡಿಕೇರಿಯ ಸಂತ ಜೋಸೆಫ್ ನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.
ಫೆ.28ರಂದು ಸಂಜೆ 5:30ರ ವೇಳೆಗೆ ಪೂಜಾ ಬಸ್ ಮೂಲಕ ಬಂದು ಬೆಟ್ಟತ್ತೂರಿನ ತನ್ನ ಮನೆ ಸಮೀಪ ಬಸ್ಸಿನಿಂದ ಇಳಿದು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದೆ.
ದಾಳಿಯಿಂದ ಬಾಲಕಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಮೃತದೇಹವನ್ನು ಮಡಿಕೇರಿಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಯಲಿದೆ.
ಈ ದುರ್ಘಟನೆಯ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆ ದಾಳಿಯಿಂದ ಅನೇಕ ಜೀವಗಳು ಹೋಗಿದ್ದರು. ಅರಣ್ಯ ಇಲಾಖೆ ಮತ್ತು ಸರಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ದೂರಿದ್ದಾರೆ.

























