ಪುತ್ತೂರು, ಮಾ.05: ಪುತ್ತೂರಿನಲ್ಲಿ ಕಾರಿನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಪಿಸ್ತೂಲ್ ತೋರಿಸಿ ಗುಂಡು ಹೊಡೆಯಲು ಯತ್ನಿಸಿದ ಘಟನೆಗೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ಆರೋಪಿತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣದ ಪಿರ್ಯಾದಿದಾರರಾದ ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ (42) ಅವರು ದಿನಾಂಕ 02-03-2026 ರಂದು ಮಧ್ಯಾಹ್ನ ಪುತ್ತೂರಿನಿಂದ ಕೂರ್ನಡ್ಕಕ್ಕೆ ತಮ್ಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಪುತ್ತೂರು ರಿಲ್ಯಾನ್ಸ್ ಮಾಲ್ ಸಮೀಪ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಬಂದ ಸುಮಾರು 30 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ಪಿರ್ಯಾದಿದಾರರ ಕಡೆಗೆ ಪಿಸ್ತೂಲ್ ತೋರಿಸಿ ಗುಂಡು ಹೊಡೆಯಲು ಯತ್ನಿಸಿ ಬೆದರಿಕೆ ಹಾಕಿದ್ದಾನೆ. ಈ ವೇಳೆ ಪಿರ್ಯಾದಿದಾರರು ಹಾಗೂ ಸಾರ್ವಜನಿಕರು ಸೇರಿ ಆರೋಪಿತನನ್ನು ಹಿಡಿಯಲು ಮುಂದಾದಾಗ ಆತನು ಮೋಟಾರುಸೈಕಲ್ ಸಮೇತ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ.ನಂ. 26/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 351(3) ಹಾಗೂ ಶಸ್ತ್ರಾಸ್ತ್ರ ಕಾಯ್ದೆ 1959ರ ಕಲಂ 3, 25, 27ರಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ತನಿಖೆಯ ಸಂದರ್ಭದಲ್ಲಿ ಆರೋಪಿತನಾದ ಪುತ್ತೂರು ನಿವಾಸಿ ಮಹಮ್ಮದ್ ಶಫಿಕ್ (19) ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


























