ಮಂಗಳೂರು: ಅಪ್ರಾಪ್ತ ಪ್ರಾಯದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಅಬೂಬಕ್ಕರ್ (50) ವಿರುದ್ಧ BNS ಕಲಂ 64(1), 351(2) ಹಾಗೂ ಪೋಕ್ಸೋ ಕಾಯ್ದೆ (POCSO Act 2012) ಯ 4(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ತನಿಖೆಯನ್ನು ಆಗಿನ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ನಿರೀಕ್ಷಕರಾಗಿದ್ದ ಶಿವಕುಮಾರ ಬಿ. ಅವರು ನಡೆಸಿ, ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರಾಕ್ ವಿಶೇಷ ನ್ಯಾಯಾಲಯ (FTSC-2) ನಲ್ಲಿ ನಡೆದು, ಮಾರ್ಚ್ 7, 2026 ರಂದು ನ್ಯಾಯಾಲಯವು ಆರೋಪಿಯನ್ನು ದೋಷಿ ಎಂದು ತೀರ್ಪು ನೀಡಿತು. ತೀರ್ಪಿನಂತೆ ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಲಾಗಿದೆ.
ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಸಹನಾದೇವಿ ಅವರು ಸಮರ್ಥವಾಗಿ ವಾದ ಮಂಡಿಸಿದರು. ತನಿಖೆಗೆ ಬಂಟ್ವಾಳ ಗ್ರಾಮಾಂತರ ಠಾಣೆಯ ಹೆಚ್ಸಿ 345 ಪ್ರಶಾಂತ್ ಕುಮಾರ್ ಹಾಗೂ ನ್ಯಾಯಾಲಯ ಕರ್ತವ್ಯ ಸಿಬ್ಬಂದಿಯಾಗಿ ಪಿಸಿ 445 ಸಂತೋಷ್ ಡಿ. ಜಾಧವ ಅವರು ಸಹಕಾರ ನೀಡಿದರು.

























