ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರ್ಚ್ 12 ರಂದು ಕಾರೊಂದು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.
ಘಟನೆಯ ಬಳಿಕ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 42/2026 ರಂತೆ ಭಾರತೀಯ ನ್ಯಾಯ ಸಂಹಿತೆ–2023ರ ಕಲಂ 281, 125(ಎ) ಹಾಗೂ ಐಎಂವಿ ಕಾಯ್ದೆಯ ಕಲಂ 134(ಎ & ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದರು.
ತನಿಖೆಯ ವೇಳೆ ಅಪಘಾತಕ್ಕೆ ಕಾರಣವಾದ ಕಾರನ್ನು ಅಪ್ರಾಪ್ತ ಬಾಲಕ ಚಾಲನೆ ಮಾಡುತ್ತಿದ್ದುದಾಗಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ವಾಹನದ ಮಾಲಕಿ ಹಾಗೂ ಅಪ್ರಾಪ್ತ ಬಾಲಕನ ತಾಯಿ, ಪುತ್ತೂರು ನಿವಾಸಿ ಕೆ. ಎ. ಮಮತಾಜ್ (42) ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಕುರಿತು ಮುಂದಿನ ತನಿಖೆ ಪುತ್ತೂರು ಗ್ರಾಮಾಂತರ ಪೊಲೀಸರು ಮುಂದುವರಿಸಿದ್ದಾರೆ.
























