ಉಡುಪಿ ಜಿಲ್ಲೆಯ ಕಟಪಾಡಿ ಸಮೀಪ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್ ಪಲ್ಟಿಯಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಈ ಘಟನೆ ಸ್ಥಳದಲ್ಲಿ ಆತಂಕದ ವಾತಾವರಣವನ್ನು ಉಂಟುಮಾಡಿದೆ.
ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟ್ಯಾಂಕರ್ ಕಟಪಾಡಿ ಜಂಕ್ಷನ್ ಬಳಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಅಲ್ಲಿ ನಡೆಯುತ್ತಿರುವ ಅಂಡರ್‌ಪಾಸ್ ಕಾಮಗಾರಿಯ ಹಿನ್ನೆಲೆಯಲ್ಲಿ ರಸ್ತೆಯನ್ನು ಡೈವರ್ಷನ್ ಮಾಡಲಾಗಿತ್ತು. ಈ ತಿರುವಿನಲ್ಲಿ ವೇಗವಾಗಿ ಬಂದ ಟ್ಯಾಂಕರ್ ಅನ್ನು ಚಾಲಕ ಏಕಾಏಕಿ ತಿರುಗಿಸಲು ಯತ್ನಿಸಿದಾಗ ನಿಯಂತ್ರಣ ತಪ್ಪಿ ಪಲ್ಟಿಯಾದ್ದಾಗಿ ಹೇಳಲಾಗುತ್ತಿದೆ.
ಘಟನೆ ತಿಳಿಯುತ್ತಿದ್ದಂತೆ ಉಡುಪಿ ಅಗ್ನಿಶಾಮಕ ದಳದ ಮೂರು ವಾಹನಗಳು ಸ್ಥಳಕ್ಕೆ ಧಾವಿಸಿ, ಟ್ಯಾಂಕರ್‌ಗೆ ನಿರಂತರವಾಗಿ ನೀರು ಹಾಯಿಸಿ ತಂಪಾಗಿಡುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ಪ್ರಯತ್ನಿಸುತ್ತಿವೆ. ಜೊತೆಗೆ ಇತರ ಟ್ಯಾಂಕರ್‌ಗಳ ಮೂಲಕವೂ ನೀರನ್ನು ತಂದು ಸುರಿಯಲಾಗುತ್ತಿದೆ.
ತಜ್ಞರು ಸ್ಥಳಕ್ಕೆ ಆಗಮಿಸಿ ಟ್ಯಾಂಕರ್‌ನಲ್ಲಿರುವ ಗ್ಯಾಸ್ ಅನ್ನು ಸುರಕ್ಷಿತವಾಗಿ ಮತ್ತೊಂದು ಟ್ಯಾಂಕರ್‌ಗೆ ವರ್ಗಾಯಿಸುವ ಕಾರ್ಯ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳದಲ್ಲೇ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮಾರು ಒಂದು ಗಂಟೆ ಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಹೆದ್ದಾರಿಯ ಒಂದು ಬದಿಯನ್ನು ತಾತ್ಕಾಲಿಕವಾಗಿ ಮುಚ್ಚಿ, ಕಟಪಾಡಿಯ ಒಳರಸ್ತೆಗಳ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
























