ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್ಗಳನ್ನು ಹಂಚಿಕೊಂಡ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
2025ರಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನಂತರದ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಉದ್ವಿಗ್ನತೆಯನ್ನು ಉಂಟುಮಾಡುವ ರೀತಿಯ ಪೋಸ್ಟ್ಗಳನ್ನು ಹಂಚಿಕೊಂಡಿರುವ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 179/2025ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 353(1), 353(2), 61(2), 55 ಅಡಿ ಪ್ರಕರಣ ದಾಖಲಾಗಿತ್ತು ಮತ್ತು ತನಿಖೆ ಮುಂದುವರಿಯುತ್ತಿತ್ತು.
ತನಿಖೆಯ ವೇಳೆ “TN-MADDY” ಎಂಬ ಖಾತೆಯಿಂದ ಕೋಮು ಪ್ರಚೋದಕ ಪೋಸ್ಟ್ಗಳನ್ನು ಹಂಚಿಕೊಂಡಿದ್ದ ವ್ಯಕ್ತಿಯನ್ನು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಡುಬೆಳ್ಳೆ ಗ್ರಾಮದ ಪವನ್ ಆಚಾರ್ಯ (22), ತಂದೆ ಬಾಲಕೃಷ್ಣ ಎಂದು ಗುರುತಿಸಲಾಗಿದೆ.
ದಿನಾಂಕ 25-03-2026 ರಂದು ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಇದೇ ಆರೋಪಿತನ ವಿರುದ್ಧ ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯಲ್ಲಿ ಅ.ಕ್ರ. 95/2025ರಂತೆ ಮತ್ತೊಂದು ಪ್ರಕರಣವೂ ದಾಖಲಾಗಿದ್ದು, ಅದರ ತನಿಖೆಯೂ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.


























