ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ ವ್ಯಕ್ತಿಯೋರ್ವನ ಮೇಲೆ ನಗರ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾದ ಘಟನೆ ನಡೆದಿದೆ.
ಕಾರ್ಕಳ ಗುಲ್ವಾಡಿಯ ಇಮ್ರಾನ್ (24) ಆರೋಪಿ. 12 ವರ್ಷದ ಬಾಲಕಿಗೆ ಇಮ್ರಾನ್ ಎಂಬಾತ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಬಾಲಕಿಯ ಮನೆಗೆ ಭೇಟಿ ನೀಡಿ ಆಪ್ತಸಮಾಲೋಚನೆ ನಡೆಸಿದ ವೇಳೆ ಸಂಪೂರ್ಣ ವಿವರ ಬಯಲಾಗಿತ್ತು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ಅವರು ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದಾರೆ. ಅದರಂತೆ ವೃತ್ತ ನಿರೀಕ್ಷಕರಾದ ಸಂಪತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಉಪ ನಿರೀಕ್ಷಕರಾದ ಮಧು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಅಪ್ರಾಪ್ತ ಬಾಲಕಿಯನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸಲು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಆಪ್ತಸಮಾಲೋಚಕಿ ಅಂಬಿಕಾ, ಸಮಾಜಕಾರ್ಯಕರ್ತ ಯೋಗೀಶ್, ಕಾರ್ಕಳ ನಗರ ಠಾಣಾ ಸಿಬ್ಬಂದಿ ಶ್ಯಾಮ್, ರವೀಂದ್ರ ಇನ್ನಿತರರು ಭಾಗವಹಿಸಿದ್ದರು. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರೊನಾಲ್ಡ್ ಫುರ್ಟಾಡೋ ಅವರ ಆದೇಶದಂತೆ ಅಪ್ರಾಪ್ತ ಬಾಲಕಿಗೆ ಸೂಕ್ತ ಪುನರ್ವಸತಿ ಕಲ್ಪಿಸಲಾಗಿದೆ. ವಿರುದ್ಧ ಪೋಕ್ಸೋ ಮತ್ತು ಐ .ಟಿ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.