ಬೆಂಗಳೂರು: ಸರ್ಕಾರಿ ವೆಚ್ಚ ಹಾಗೂ ಸರ್ಕಾರದ ನೆರವಿನಿಂದ ಕೈಗೊಳ್ಳುವ ಯಾವುದೇ ಕಾಮಗಾರಿ ಹಾಗೂ ಯೋಜನೆಗಳಲ್ಲಿ ಜನ ಪ್ರತಿನಿಧಿಗಳ ಹೆಸರು ಮತ್ತು ಫೋಟೋಗಳನ್ನು ಅಳವಡಿಸಿ ಪ್ರಚಾರ ನೀಡಬಾರದು. ಒಂದು ವೇಳೆ ಅಳವಡಿಸಿದರೆ ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಎಚ್.ಎಂ ವೆಂಕಟೇಶ್ ಸಲ್ಲಿಸಿದ್ದ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಜಾಹೀರಾತುಗಳಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಹೆಸರು ಮತ್ತು ಫೋಟೋಗಳನ್ನು ಅಳವಡಿಸುವುದನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.
ಈಗಾಗಲೇ ಸರ್ಕಾರಿ ಕಾಮಗಾರಿಗಳ ಮೇಲೆ ಜನ ಪ್ರತಿನಿಧಿಗಳು ಹೆಸರು ಮತ್ತು ಪೋಟೋಗಳನ್ನು ಆಳವಡಿಸಿದ್ದರೆ, ಕೂಡಲೇ ಅವುಗಳನ್ನು ತೆರವುಗೊಳಿಸಬೇಕು. ಒಂದು ವೇಳೆ ಅಂತಹ ಪ್ರಕರಣಗಳು ಮರುಕಳಿಸಿದ್ದಲ್ಲಿ ಕಾಯ್ದೆ-1981 ಅಡಿ ಸಂಬಂಧಪಟ್ಟವರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದೇಶ ಅನುಷ್ಠಾನಗೊಳಿಸಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.