ಉಪ್ಪಿನಂಗಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಮೀಪದ ಉಪ್ಪಿನಂಗಡಿಯ ಹಳೇಗೇಟು ಎಂಬಲ್ಲಿ ಹಸಿ ಮೀನು ಸ್ಟಾಲ್ ನಲ್ಲಿ ಹಿಂದೂ ಸಂಘಟನೆಯ ಮುಖಂಡರ ಮೇಲೆ ನಡೆದ ತಲ್ವಾರು ದಾಳಿಗೆ ಸಂಬಂಧಿಸಿ ಡಿ.14 ರಂದು ಬೆಳಿಗ್ಗೆ ಮೂವರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ಠಾಣೆಯಲ್ಲಿರಿಸಿದ ಘಟನೆಗೆ ಸಂಬಂಧಿಸಿದಂತೆ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದ್ದರು. ಸಂಜೆ ವೇಳೆಗೆ ಪೊಲೀಸರು ಓರ್ವನನ್ನು ಬಿಡುಗಡೆಗೊಳಿಸಿದ್ದರು. ಆದರೂ ಪಟ್ಟುಬಿಡದ ಪಿಎಫ್ಐ ಠಾಣೆಯ ಮುಂಭಾಗ ಜಮಾಯಿಸಿದ್ದರು. ಈ ನಿಟ್ಟಿನಲ್ಲಿ ಜನರನ್ನು ಚದುರಿಸುವ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಉಪ್ಪಿನಂಗಡಿ ಪೇಟೆಯಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
144 ಸೆಕ್ಷನ್ ಜಾರಿಯಿದ್ದರೂ, ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಯತ್ನಿಸಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಿಂದಾಗಿ ಪೊಲೀಸರಿಗೂ ಹಲ್ಲೆಯಾಗಿದೆ ಎಂದು ತಿಳಿದು ಬಂದಿದೆ.
ಗಾಯಗೊಂಡವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆ ತರಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇತ್ತೀಚಿಗೆ ಕೆಲ ದಿನಗಳಿಂದ ಉಪ್ಪಿನಂಗಡಿ ಪರಿಸರದಲ್ಲಿ ಹಲವಾರು ದುಷ್ಕೃತ್ಯಗಳು ನಡೆಯುತ್ತಿದ್ದು, ಸಾರ್ವಜನಿಕರಲ್ಲಿ ಆತಂಕವನ್ನುಂಟು ಮಾಡಿದೆ.




























