ಮಂಗಳೂರು: ರಾಜ್ಯದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗ ಹಾಗೂ ಓಮಿಕ್ರಾನ್ ರೂಪಾಂತರ ವೈರಸ್ ಉಲ್ಬಣಗೊಳ್ಳುತ್ತಿರುವ ಕಾರಣ ಧಾರ್ಮಿಕ ಸಂಸ್ಥೆಗಳ ಆಡಳಿತಾಧಿಕಾರಿ ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ, ಅನುವಂಶಿಕ ಮೊತ್ತೇಸರರು, ಆಡಳಿತದಾರರಿಗೆ ಸಂಸ್ಥೆಗಳಲ್ಲಿ ನಡೆಯುವ ಜಾತ್ರಾ ಸಂದರ್ಭದಲ್ಲಿ ಸೋಂಕು ನಿಯಂತ್ರಣದ ಕುರಿತು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಮತ್ತು ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ರಿಕ್ರಿಯೇಷನ್ ಕ್ಲಬ್ ಗಳನ್ನು ಸರಕಾರದ ಆದೇಶದ ವರೆಗೆ ಕ್ಲೋಸ್ ಮಾಡುವಂತೆ ದ.ಕ ಜಿಲ್ಲಾಧಿಕಾರಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಹಾಗೂ ಓಮಿಕ್ರಾನ್ ರೂಪಾಂತರ ವೈರಸ್ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆ ಸರ್ಕಾರದ ಉಲ್ಲೇಖದ ಆದೇಶದಲ್ಲಿ ಜಾತ್ರೆಗಳು, ಹಬ್ಬಗಳು, ಮೆರವಣಿಗೆಗಳು ಮತ್ತು ಜನಸಂದಣಿ ಸೇರುವ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡದಿರುವುದರಿಂದ ಕೋರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟನಲ್ಲಿ ಭಕ್ತಾದಿಗಳು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ಈಗಾಗಲೇ ಪ್ರಾರಂಭವಾಗಿರುವ ಜಾತ್ರಾ ಉತ್ಸವ, ರಥೋತ್ಸವ ಉತ್ಸವಾದಿಗಳನ್ನು ದೇವಾಲಯದ ಆಗಮಿಕರು, ತಂತ್ರಿಗಳು, ಅರ್ಚಕರು, ಆಡಳಿತ ಮಂಡಳಿ ಸಿಬ್ಬಂದಿಯವರು ಸಾಂಕೇತಿಕವಾಗಿ ದೇವಾಲಯದ ಒಳಾಂಗಣ ಹಾಗೂ ಆವರಣದೊಳಗೆ ಭಕ್ತಾದಿಗಳು ಸಾರ್ವಜನಿಕರ ಸಂದಣಿ ಇಲ್ಲದಂತೆ ನಡೆಸಿ ಪೂರ್ಣಗೊಳಿಸಲು ತಿಳಿಸಲಾಗಿದೆ.
ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರಾ ಸಂದರ್ಭಗಳಲ್ಲಿ ಸಭೆ ಸಮಾರಂಭಗಳು ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂತೆ, ಸಾರ್ವಜನಿಕ ಅನ್ನಸಂತರ್ಪಣೆ ಇನ್ನಿತರ ಜನಸಂದಣಿ ಸೇರುವ ಕಾರ್ಯಕ್ರಮಗಳಿಂದ
ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಭಕ್ತಾದಿಗಳ ಹಿತದೃಷ್ಟಿಯಿಂದ ಸರ್ಕಾರದ
ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ವರದಿಯಾಗುತ್ತಲೇ ಇವೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯಲ್ಲಿನ ರಿಕ್ರಿಯೇಷನ್ ಕ್ಲಬ್‌ಗಳಲ್ಲಿ ಇಸ್ಪೀಟ್ ಕಾರ್ಡ್ ಆಟವಾಡುವ ವೇಳೆ, ಕಾರ್ಡ್‌ಗಳನ್ನು ಒಬ್ಬರು ಮತ್ತೊಬ್ಬರಿಗೆ ನೀಡುವ ಸಂದರ್ಭ ಕೋವಿಡ್ ಸೋಂಕು ಸಾಂಕ್ರಾಮಿಕವಾಗಿ ಪಸರಿಸುವ ಸಾಧ್ಯತೆಗಳು ಹೆಚ್ಚಾಗಿರುವುದು ಗಮನಿಸಲಾಗಿದೆ.
ರಿಕ್ರಿಯೇಷನ್ ಕ್ಲಬ್‌ಗಳಲ್ಲಿ ಇಸ್ಪೀಟ್ ಆಡುವಾಗ ಕನಿಷ್ಟ ಒಂದು ಮೀಟರ್ ಸುರಕ್ಷಿತ ಅಂತರ ಸಾಧ್ಯತೆ ಇಲ್ಲ, ಇಸ್ಪೀಟ್ ಕಾರ್ಡ್ ಆಡುವಾಗ ಒಬ್ಬರಿಂದ ಮತ್ತೊಬ್ಬರಿಗೆ ಕಾರ್ಡ್‌ಗಳನ್ನು ಹಂಚುವ ಸಂದರ್ಭದಲ್ಲಿ ಸೋಂಕಿತ ವ್ಯಕ್ತಿ ಇದ್ದಲ್ಲಿ ಅವರ ಮೂಲಕ ಸೋಂಕು ಹರಡುವ ಸಾಧ್ಯತೆ ಅಧಿಕವಿದೆ. ಆಟದಲ್ಲಿ ಭಾಗವಹಿಸುವ ವ್ಯಕ್ತಿಗಳಲ್ಲಿ ಆಟದ ಕಡೆ ಮನಸ್ಸನ್ನು ಕೇಂದ್ರೀಕರಿಸುವುದರಿಂದ ಆವರಲ್ಲಿ ಉದ್ವೇಗ,ಕೋಪ, ಆತಂಕಕ್ಕೆ ಒಳಗಾಗುವ ಸಾಧ್ಯತೆ ಇದೆ.
ರಿಕ್ರಿಯೇಷನ್ ಕ್ಲಬ್‌ಗಳಲ್ಲಿ ಭಾಗವಹಿಸುವ ವ್ಯಕ್ತಿಗಳು ಮಾಸ್ಕ್, ಸ್ಯಾನಿಟೈಸರ್ ಉಪಯೋಗಿಸುವ ಸಾಧ್ಯತೆ ಕಡಿಮೆ ಇರುವುದರಿಂದ ಸೋಂಕು ಹರಡುವ ಸಾಧ್ಯತೆಗಳು ದಟ್ಟವಾಗಿವೆ. ಈ ಹಿನ್ನೆಲೆಯಲ್ಲಿ ಕ್ಲಬ್‌ಗಳನ್ನು ಬಂದ್ ಮಾಡಲಾಗುತ್ತಿದೆ. ಆದೇಶವನ್ನು ಪಾಲಿಸದೆ ವ್ಯತಿರಿಕ್ತವಾಗಿ ವರ್ತಿಸಿದ್ದಲ್ಲಿ ಅಂತವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗಗಳ ಅಧಿನಿಯಮದಡಿ ಕಾನೂನು ಕ್ರಮ ಜರುಗಿಸಲಾಗುವುದು
ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶದಲ್ಲಿ ತಿಳಿಸಿದ್ದಾರೆ.