ಸರ್ಕಾರಿ ನೌಕರಿ ನಿರೀಕ್ಷೆಯಲ್ಲಿರುವ ಯುವಕರಿಗೆ ಕೇಂದ್ರ ಸರ್ಕಾರ ಗುಡ್ನ್ಯೂಸ್ ನೀಡಿದೆ. ಮುಂದಿನ ಒಂದೂವರೆ ವರ್ಷಗಳ ಒಳಗೆ 10 ಲಕ್ಷ ಮಂದಿಗೆ ಉದ್ಯೋಗ ನೀಡುವುದಾಗಿ ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.
‘ಮಿಷನ್ ಮೋಡ್’ ಅಡಿಯಲ್ಲಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಉದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ ಟ್ವೀಟ್ ಮಾಡಿ ಮಾಹಿತಿ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲ (Human Resources) ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಮುಂದಿನ ಒಂದೂವರೆ ವರ್ಷಗಳಲ್ಲಿ 10 ಲಕ್ಷ ಮಂದಿಯನ್ನ ‘ಮಿಷನ್ ಮೋಡ್’ನಲ್ಲಿ ನೇಮಿಸಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ ಎಂದು ಪಿಎಂಒ ಟ್ವೀಟ್ ಮಾಡಿದೆ.
ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ನಿರಂತರ ಟೀಕೆಗಳ ನಡುವೆ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಇನ್ನು ಕೇಂದ್ರ ಸರ್ಕಾರ ನಿರ್ಧಾರವನ್ನ ಬಿಜೆಪಿ ನಾಯಕ ವರುಣ್ ಗಾಂಧಿ, ಸ್ವಾಗತಿಸಿದ್ದಾರೆ. ನಿರುದ್ಯೋಗಿ ಯುವಕರ ನೋವು ಮತ್ತು ಹೃದಯವನ್ನು ಅರ್ಥಮಾಡಿಕೊಂಡ ಮೋದಿಗೆ ಧನ್ಯವಾದಗಳು ಎಂದಿದ್ದಾರೆ.


























