ಬಂಟ್ವಾಳ: ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿಯ ನಿಟ್ಟಿನಲ್ಲಿ ಸ್ಥಳೀಯಾಡಳಿತ ಮತ್ತು ಸಂಸ್ಥೆಯ ಸಿಬ್ಬಂದಿಗಳ ಜೊತೆಗೆ ಸಾರ್ವಜನಿಕರು ಕೂಡಾ ಕೈಜೋಡಿಸಿದಾಗ ಗುರಿ ಮುಟ್ಟಲು ಸಾಧ್ಯ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.
ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರುಗಿದ ಆರೋಗ್ಯ ರಕ್ಷಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯ ಶ್ಲಾಘನೀಯ. ಹಲವು ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಿ ಜೀವದ ಹಂಗನ್ನು ತೊರೆದು, ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದ್ದೀರಿ. ತಾವೆಲ್ಲರೂ ಅಭಿನಂದನೀಯರು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ವೈದ್ಯಾಧಿಕಾರಿ ಡಾ. ಶಶಿಕಲಾರವರು, ಆಸ್ಪತ್ರೆಯ ಆಗುಹೋಗುಗಳಲ್ಲಿ ನಮ್ಮ ಸಿಬ್ಬಂದಿ ಅವಿರತ ಶ್ರಮಿಸುತ್ತಿದ್ದಾರೆ. ಅವರ ಕಾರ್ಯವನ್ನು ಯಾವತ್ತೂ ಮರೆಯಲು ಅಸಾಧ್ಯ. ಆರೋಗ್ಯ ಕೇಂದ್ರದ ಅಭಿವೃದ್ಧಿಗಾಗಿ, ಇದರ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತ್ ಗಳು ನಮ್ಮ ಜೊತೆ ಕೈ ಜೋಡಿಸಬೇಕು ಎಂದು ವಿನಂತಿಸಿಕೊಂಡರು.
ಸಭೆಯಲ್ಲಿ ಆಸ್ಪತ್ರೆಯ ಅಭಿವೃದ್ಧಿಗೆ ಸಂಬಂಧಪಟ್ಟ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಇಡ್ಕಿದು ಪಂಚಾಯತ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಕಡೇಶಿವಾಲಯ ಪಂಚಾಯತ್ ಅಧ್ಯಕ್ಷ ಸುರೇಶ್ ಶೆಟ್ಟಿಗಾರ್, ನೆಟ್ಲಮುಡ್ನೂರು ಪಂಚಾಯತ್ ಅಧ್ಯಕ್ಷ ಸತೀಶ್ ಪೂಜಾರಿ, ಬರಿಮಾರು ಪಂಚಾಯತ್ ಅಧ್ಯಕ್ಷೆ ಶಶಿಕಲಾ, ಮಾಣಿ ಗ್ರಾಮ ಪಂಚಾಯತ್ ಸದಸ್ಯ ಇಬ್ರಾಹಿಂ.ಕೆ.ಮಾಣಿ, ಶಾಲಾ ಶಿಕ್ಷಕಿಯರು, ಆರೋಗ್ಯ ಸಹಾಯಕಿಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು. ಆರೋಗ್ಯ ಸಹಾಯಕಿ ಅರುಂಧತಿ ಸ್ವಾಗತಿಸಿದರು. ಚಿನ್ನಮ್ಮ ವಂದಿಸಿದರು.

























