ರ‍್ಯಾಗಿಂಗ್‌ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ.
ಕಾಕತೀಯ ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವೈದ್ಯಕೀಯ ಅಭ್ಯಾಸ ಮಾಡುತ್ತಿದ್ದ ಪ್ರೀತಿ (26) ಮೃತ ವಿದ್ಯಾರ್ಥಿನಿ.
ಪ್ರೀತಿ ಎಂಜಿಎಂ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಕೆಲ ಸಮಯದ ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣ ಅವರನ್ನು ಹೈದ್ರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಕೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ತಡರಾತ್ರಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿನಿಯ ತಂದೆ ನೀಡಿದ ದೂರಿನ ಮೇರೆಗೆ, ಎರಡನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿ ಮೊಹಮ್ಮದ್ ಅಲಿ ಸೈಫ್ ನನ್ನು ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ, ರ‍್ಯಾಗಿಂಗ್, ಆತ್ಮಹತ್ಯೆಗೆ ಪ್ರಚೋದನೆ ಮತ್ತು ಕಿರುಕುಳದ ಆರೋಪದ ಮೇಲೆ ಬಂಧಿಸಿದ್ದಾರೆ.


























