ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಯ ಅಂತಿಮ ಕಸರತ್ತು ನಡೆಸಿದ್ದಾರೆ. ಆಕಾಂಕ್ಷಿಗಳು ಟಿಕೆಟ್ ಪಡೆಯೋ ಆತುರದಲ್ಲಿದ್ರೆ ಟಿಕೆಟ್ ಕೈ ತಪ್ಪಿದವರು ಪಕ್ಷದಿಂದ ಪಕ್ಷಕ್ಕೆ ಹಾರುತ್ತಿದ್ದಾರೆ. ಕಾಂಗ್ರೆಸ್ ಈಗಾಗಲೇ 2 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ಚುನಾವಣೆಗೆ ರೆಡಿಯಾಗಿದೆ. ಇದೀಗ ಬಿಜೆಪಿಯ ಸರದಿ ಶುರುವಾಗಿದೆ. ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಗೆ ಫೈನಲ್ ಟಚ್ ಕೊಡುತ್ತಿದೆ. ಇಂದು ರಾತ್ರಿಯ ಒಳಗೆ ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುತ್ತಿದೆ.
ದೆಹಲಿಯ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯುತ್ತಿದೆ. ಮಹತ್ವದ ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಧರ್ಮೇಂದ್ರ ಪ್ರಧಾನ್ ಭಾಗಿಯಾಗಿದ್ದಾರೆ. ರಾಜ್ಯ ನಾಯಕರಾದ ಪ್ರಹ್ಲಾದ್ ಜೋಷಿ, ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲ್, ಅರುಣ್ ಸಿಂಗ್ ಕೂಡ ಆಗಮಿಸಿದ್ದಾರೆ.
ಈ ಸಭೆಯಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುತ್ತಿದೆ. ಕೇಂದ್ರ ಚುನಾವಣಾ ಸಮಿತಿ ಸಭೆಗೂ ಮುನ್ನ ಇಂದು ಬೆಳಗ್ಗೆ 11 ಗಂಟೆಗೆ ದೆಹಲಿಯ ಜೆಪಿ ನಡ್ಡಾ ನಿವಾಸದಲ್ಲಿ ಮಹತ್ವದ ಸಭೆ ನಡೆದಿತ್ತು. ಸತತ ನಾಲ್ಕು ಗಂಟೆಗಳ ಕಾಲ ಮಹತ್ವದ ಮಾತುಕತೆ ನಡೆದಿತ್ತು. ಈ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನವನ್ನು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆಯೋ ಕೇಂದ್ರ ಚುನಾವಣಾ ಸಮಿತಿ ಸಭೆಯ ಮುಂದೆ ಮಂಡಿಸಲಾಗುತ್ತದೆ. ಈ ಸಭೆಯ ನಂತರ ಇಂದು ತಡರಾತ್ರಿ ಅಥವಾ ನಾಳೆ ಬೆಳಗ್ಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಯಾಗೋ ಸಾಧ್ಯತೆ ಇದೆ.
‘ಇವತ್ತು ರಾತ್ರಿಯೇ ಪಟ್ಟಿ ಬಿಡುಗಡೆ’..!!??
ಕರ್ನಾಟಕದಲ್ಲಿ ಮತ್ತೊಮ್ಮೆ ಕಮಲ ಅರಳಿಸಲು ಮುಂದಾಗಿರೋ ಬಿಜೆಪಿ ತನ್ನ ರಣತಂತ್ರದ ಭಾಗವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಹಲವು ಮಾನದಂಡಗಳನ್ನು ಅನುಸರಿಸಿರುವ ಬಿಜೆಪಿ ಹೈಕಮಾಂಡ್ ಕೆಲವು ಹಾಲಿ ಶಾಸಕರಿಗೆ ಕೊಕ್ ನೀಡುವ ಸಾಧ್ಯತೆ ಇದೆ. ಹೀಗಾಗಿ ಯಾರಿಗೆ ಟಿಕೆಟ್ ಸಿಗುತ್ತೆ ಯಾರಿಗೆ ಮಿಸ್ ಆಗುತ್ತೆ ಅನ್ನೋದು ಕುತೂಹಲ ಕೆರಳಿಸಿದೆ.
ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವುದು ಹೊಸ ವಿಷಯವಲ್ಲ. ಈ ಹಿಂದೆಯೂ ಅನಾರೋಗ್ಯ ವಯಸ್ಸಿನ ಕಾರಣದಿಂದ ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪಿದೆ. ಇವತ್ತು ರಾತ್ರಿಯೇ ಬಿಜೆಪಿ ಅಭ್ಯರ್ಥಿಗಳ ಮೊದಲನೆಯ ಪಟ್ಟಿ ಬಿಡುಗಡೆ ಆಗಲಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

























