ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಾಗಲೇ ಬಿಜೆಪಿಯ ಹಿರಿಯ ನಾಯಕರೂ ಆಗಿರುವ ಕೆಎಸ್ ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.
ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಈಶ್ವರಪ್ಪ, ತಾನು ಸ್ವಯಂ ನಿವೃತ್ತಿ ಘೋಷಣೆ ಮಾಡುತ್ತಿದ್ದೇನೆ. ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಕ್ಷೇತ್ರಕ್ಕೆ ನನ್ನ ಹೆಸರನ್ನು ಪರಿಗಣಸದಂತೆ ಮನವಿ ಮಾಡಿಕೊಂಡಿದ್ದಾರೆ.
ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು ಎಂದು ಪತ್ರದಲ್ಲಿ ತಿಳಿಸಿದ್ದಾರೆ.


























