ಪುತ್ತೂರು : ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ವತ್ಸಲಾ ರಾಜ್ಞಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಪಿಯುಸಿ ಅತಿ ಮುಖ್ಯವಾದ ಘಟ್ಟ ಈ ವಯಸ್ಸು ಮಕ್ಕಳಿಗೆ ವರವೂ ಹೌದು ಶಾಪವೂ ಹೌದು. ಭವಿಷ್ಯದ ಕನಸುಗಳಿಗೆ ಈ ವಯಸ್ಸು ಅಡಿಪಾಯ ಅದೇ ರೀತಿ ಮಕ್ಕಳು ದಾರಿ ತಪ್ಪುವ ಸಾಧ್ಯತೆಗಳು ಹೆಚ್ಚು ಈ ನಿಟ್ಟಿನಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಉತ್ತಮ ಬಾಂಧವ್ಯ ಅತಿ ಮುಖ್ಯ ಎಂದರು.
ಪ್ರತಿಯೊಬ್ಬ ವಿದ್ಯಾರ್ಥಿಯೂ ಕಾಲೇಜಿನಲ್ಲಿರುವ ಎಲ್ಲಾ ಸವಲತ್ತುಗಳನ್ನು ಹಾಗೂ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಸಾಧನೆಗೈದು ಕಾಲೇಜಿಗೆ, ಪೋಷಕರಿಗೆ ಹಾಗೂ ಶಿಕ್ಷಕರಿಗೆ ಕೀರ್ತಿ ತರುವಂತವರಾಗಬೇಕು ಎಂದು ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲರಾದ ಮಹೇಶ್ ನಿಟಿಲಾಪುರ ಇವರು ಕಾಲೇಜಿನ ನೀತಿ ನಿಯಮಗಳ ಪರಿಚಯ ನೀಡಿದರು. ಕಾಲೇಜಿನ ವಸತಿನಿಲಯದ ನಿಯಮಗಳ ಬಗ್ಗೆ ಮುಖ್ಯ ನಿಲಯ ಪಾಲಕರಾದ ಚೇತನ್ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಗೋಪಾಲಕೃಷ್ಣ ಭಟ್, ಸದಸ್ಯರಾದ ಡಾ. ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.
ವಾಣಿಜ್ಯ ವಿಭಾಗದ ಉಪನ್ಯಾಸಕಿ ಭಾಗ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಅರುಣಾ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿಗಳಾದ ದೀಪ್ತಿ ಹಾಗೂ ಶ್ರುತಿ ಪ್ರಾರ್ಥಿಸಿದರು. ಉಪನ್ಯಾಸಕಿ ಯಶವಂತಿ ವಂದಿಸಿದರು.


























