ಲೋಕಸಭಾ ಚುನಾವಣೆ ಹಿನ್ನಲೆ ರಾತ್ರಿ ನವದೆಹಲಿಯಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯಿಂದ ಸಭೆ ನಡೆಸಲಾಯಿತು. ಮಧ್ಯರಾತ್ರಿಯವರೆಗೆ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳ ಸಿಎಂಗಳು ಭಾಗವಹಿಸಿದ್ದರು. ರಾತ್ರಿ 1.30ರವರೆಗೆ ಸಭೆ ನಡೆಸಿ ಬಿಜೆಪಿ ನಾಯಕರು ಕಚೇರಿಯಿಂದ ಹೊರ ಬಂದಿದ್ದಾರೆ.
ಇಂದು ಪಟ್ಟಿ ಬಿಡುಗಡೆ..?
ಸಭೆಯಲ್ಲಿ 150 ಕ್ಷೇತ್ರಗಳ ಟಿಕೆಟ್ ಘೋಷಣೆಯ ಬಗ್ಗೆ ಚರ್ಚೆ ನಡೆಸಲಾಗಿದೆ. ಇಂದು ಸಂಜೆ ವೇಳೆಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.
ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಉತ್ತರ ಪ್ರದೇಶ, ಗುಜರಾತ್, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಕೇರಳ, ಉತ್ತರಾಖಂಡ, ಗೋವಾ, ಜಾರ್ಖಂಡ್, ದೆಹಲಿ, ತ್ರಿಪುರಾ, ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಒಟ್ಟು 150 ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರುಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಮಾರ್ಚ್ 10 ರೊಳಗೆ 300ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ನಿರ್ಧರಿಸಲು ಬಿಜೆಪಿ ಪ್ರಯತ್ನಿಸುತ್ತಿದೆ.
ಮೊದಲ ಪಟ್ಟಿಯಲ್ಲಿ ಯಾರು..?
ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ 40 ಉನ್ನತ ನಾಯಕರ ಹೆಸರನ್ನು ಘೋಷಿಸಬಹುದು ಎಂದು ಹೇಳಲಾಗಿದೆ. ಸಭೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗುಜರಾತ್‌ನ ಭೂಪೇಂದ್ರ ಪಟೇಲ್, ಮಧ್ಯಪ್ರದೇಶದ ಮೋಹನ್ ಯಾದವ್, ಛತ್ತೀಸ್‌ಗಢದ ವಿಷ್ಣು ದೇವ್ ಸಾಯಿ, ಉತ್ತರಾಖಂಡದ ಪುಷ್ಕರ್ ಸಿಂಗ್ ಧಾಮಿ ಮತ್ತು ಗೋವಾದ ಪ್ರಮೋದ್ ಸಾವಂತ್, ಬಿ.ಎಲ್.ಸಂತೋಷ್ ಸೇರಿದಂತೆ ವಿವಿಧ ರಾಜ್ಯಗಳ ನಾಯಕರು ಬಿಜೆಪಿ ಕೇಂದ್ರ ಕಚೇರಿಗೆ ಆಗಮಿಸಿ ಚರ್ಚೆ ನಡೆಸಿದ್ದಾರೆ.
ಈ ಸಭೆಗೂ ಮೊದಲು ಪ್ರಧಾನಿ ಮೋದಿ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ಕೂಡ ನಡೆದಿದೆ. ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಈ ಸಭೆಯಲ್ಲಿ ಭಾಗಿಯಾಗಿದ್ದರು.