ಬಂಟ್ವಾಳ : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಈಗಾಗಲೇ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಅವಾಂತರ ಸೃಷ್ಟಿಯಾಗಿದೆ.

ನಿನ್ನೆಯಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ. ಈ ನಡುವೆ ಮಾಮೂಲಿ ಎಂಬಂತೆ ಕಲ್ಲಡ್ಕದಲ್ಲಿ ಮಳೆ ಅವಾಂತರವನ್ನೇ ಸೃಷ್ಟಿಸಿದ್ದು, ರಸ್ತೆ ಮೇಲೆ ಮಳೆ ನೀರು ಹರಿದು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಪ್ರದೇಶ ಕಾಮಗಾರಿ ನಡೆಯುತ್ತಿದ್ದು, ಇಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಮಾಡದ ಕಾರಣ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದೆ. ರಸ್ತೆಯಲ್ಲಿ ನೀರು ತುಂಬಿದ ಹಿನ್ನಲೆ ವಾಹನ ಸವಾರರು ಜೀವವನ್ನು ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ.



























