ನವದೆಹಲಿ : ನೂತನ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಹೆಸರು ಘೋಷಣೆ ಮಾಡಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಹಾಗೂ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ.
ಎಐಸಿಸಿ ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕದ ಜೊತೆಗೆ ಚಂಢೀಗಡ ಮತ್ತು ಅರುಣಾಚಲ ಪ್ರದೇಶ ಮಹಿಳಾ ಅಧ್ಯಕ್ಷರ ನೇಮಕ ಮಾಡಿ ಎಐಸಿಸಿ ಪತ್ರಿಕಾ ಪ್ರಕಟಣೆ ನೀಡಿದೆ.
ಸೌಮ್ಯಾ ರೆಡ್ಡಿ ಅವರು ಜಯನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ. 2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಸದ್ಯ ಪುಷ್ಪಾ ಅಮರನಾಥ್ ಅವರು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದರು.
ಪುಷ್ಪಾ ಅಮರನಾಥ್ ಅವರ ಬದಲಿಗೆ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಸೌಮ್ಯಾ ರೆಡ್ಡಿ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಈ ಹಿಂದೆ ಡಿ.ಕೆ ಶಿವಕುಮಾರ್ ಅವರು ಸಿಎಂ ಆಗಬೇಕು ಅನ್ನೋ ಒತ್ತಾಯ ಮಾಡಿದ್ದರು. ಇದೀಗ ಸೌಮ್ಯಾ ರೆಡ್ಡಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿದ್ದು, ಕೆಪಿಸಿಸಿ ಅಧ್ಯಕ್ಷರ ಆಯ್ಕೆಗೆ ದೆಹಲಿಯಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ.