ಮಂಗಳೂರು : ವಿಧಾನ ಪರಿಷತ್ ಉಪಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೆ.26ರಿಂದ ಅ.7 ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಚೇರಿ ಆವರಣದ 100 ಮೀ. ವ್ಯಾಪ್ತಿಯ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿರುತ್ತಾರೆ.
5 ಮಂದಿಗಿಂತ ಹೆಚ್ಚು ಮಂದಿ ಸೇರುವುದು, ಆಯುಧ ಶಸ್ತ್ರಾಸ್ತ್ರಗಳು ಮತ್ತು ಮಾರಕಾಸ್ತ್ರಗಳನ್ನು ಹಿಡಿದು ತಿರುಗುವುದನ್ನು ನಿರ್ಬಂಧಿಸಲಾಗಿದೆ.
ನಾಮಪತ್ರ ಸಲ್ಲಿಸುವ ಕೇಂದ್ರದ ನಿಷೇಧಿತ 100 ಮೀ. ವ್ಯಾಪ್ತಿಯಲ್ಲಿ ಚುನಾವಣೆ ಕಾರ್ಯದ ಮೇಲೆ ನಿರತರಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಅಭ್ಯರ್ಥಿಗಳು, ಅನುಮತಿ ಹೊಂದಿದ ರಕ್ಷಣೆ ಇಲಾಖೆಯವರು ಹಾಗೂ ಅನುಮತಿ ಪಡೆದ ಮಾಧ್ಯಮದವರನ್ನು ಹೊರತುಪಡಿಸಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಯಾವುದೇ ಘೋಷಣೆ ಕೂಗುವುದು, ಪಟಾಕಿ ಸಿಡಿಸುವುದು, ಮೆರವಣಿಗೆ ನಡೆಸುವುದು ಹಾಗೂ ಶಾಂತಿ ಪಾಲನೆಗೆ ಭಂಗ ತರುವ ರೀತಿಯಲ್ಲಿ ವರ್ತಿಸುವಂತಿಲ್ಲ.