ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ನೀಡಲಾಗಿದ್ದ ಸಮಯವನ್ನ ವಿಸ್ತರಿಸಲಾಗಿದ್ದು ಬೆಳಗ್ಗೆ 6 ರಿಂದ ಸಂಜೆ 5 ರವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.
ಲಾಕ್ಡೌನ್ ಸಡಿಲಿಕೆಯ ಮುಖ್ಯಾಂಶಗಳು..
ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಈ ಕೆಳಕಂಡ ಸಡಿಲಿಕೆಗಳನ್ನು ನೀಡಲಾಗಿದೆ.
- ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.
- ಎಸಿ. ಚಾಲನೆಗೊಳಿಸದೇ ಹೋಟೆಲ್, ಕ್ಲಬ್ಸ್, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು.
- ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.
- ಬಸ್ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.
- ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.
- ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.
- ಲಾಡ್ಜ್ ಗಳಲ್ಲಿ ಮತ್ತು ರೆಸಾರ್ಟ್ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.
- ಜಿಮ್ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.
ಶೇ 5 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ. ಶೇ. 10 ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುವುದು.