ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಬಲವಂತದ ದೈಹಿಕ ಸಂಪರ್ಕ ಬೆಳೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ.ರಾವ್ ಇನ್ನೂ ನಾಪತ್ತೆಯಾಗಿದ್ದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಈ ಮಧ್ಯೆ ವಂಚನೆ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ.ರಾವ್ ಅವರ ತಂದೆ ಪಿ.ಜಿ.ಜಗನ್ನಿವಾಸ ರಾವ್ ಅವರು ಅಸ್ವಸ್ಥರಾಗಿ ಮಹಾವೀರ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ವೈದ್ಯರನ್ನು ವಿಚಾರಿಸಿ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಪಿ.ಜಿ.ಜಗನ್ನಿವಾಸ ರಾವ್ ಅವರು ಪೊಲೀಸರ ವಿಚಾರಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಗಿ ಸಂತ್ರಸ್ತೆಯ ತಾಯಿ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಪುತ್ತೂರು ಡಿವೈಎಸ್ಪಿ ಅರುಣ್ ನಾಗೇಗೌಡ ಅವರು ಮಹಾವೀರ ಆಸ್ಪತ್ರೆಗೆ ಹೋಗಿ ಪಿ.ಜಿ.ಜಗನ್ನಿವಾಸ ರಾವ್ ಅವರ ಆರೋಗ್ಯದ ಕುರಿತು ವೈದ್ಯರನ್ನು ವಿಚಾರಿಸಿದ್ದಾರೆಂದು ತಿಳಿದು ಬಂದಿದೆ.
ಈ ಘಟನೆ ಬೆನ್ನಲ್ಲೇ ಆಸ್ಪತ್ರೆಯಲ್ಲಿ ಪೊಲೀಸ್ ಪಹರೆಯನ್ನು ಹಾಕಲಾಗಿದೆ ಎಂದು ತಿಳಿದು ಬಂದಿದೆ.