ಪುತ್ತೂರು :ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ವರ್ಷದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ‘ಅಟಲ್ ವಿರಾಸತ್’ ಬೃಹತ್ ಸಮಾವೇಶವನ್ನು ನವೆಂಬರ್ 19ರಂದು ಪುತ್ತೂರಿನಲ್ಲಿ ಆಯೋಜಿಸಲಾಗಿದೆ ಎಂದು ಸಂಚಾಲಕ ಹಾಗೂ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ತಿಳಿಸಿದರು.
ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಬಳಿಯ ಮೈದಾನದಲ್ಲಿ ಬೆಳಗ್ಗೆ 10 ಗಂಟೆಗೆ ಸಮಾವೇಶ ಜರಗಲಿದ್ದು, ಅದಕ್ಕೂ ಮುನ್ನ ಬೆಳಗ್ಗೆ 9.30ಕ್ಕೆ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಯಿಂದ ಮೆರವಣಿಗೆ ಆರಂಭವಾಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ಸಂಸದ ಕ್ಯಾ. ಬ್ರಿಜೇಶ್ ಚೌಟ,ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಸೇರಿದಂತೆ ಜಿಲ್ಲೆಯ ಶಾಸಕರು, ಪಕ್ಷದ ವಿವಿಧ ಘಟಕಗಳ ನಾಯಕರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಯಶಸ್ಸಿಗಾಗಿ ಬೂತ್ ಮಟ್ಟದಿಂದಲೇ ಕಾರ್ಯಕರ್ತರು, ಹಿರಿಯರು ಭಾಗವಹಿಸಲಿದ್ದಾರೆ. ಉತ್ಸವದ ಛಾಯೆಯಲ್ಲಿ ಸಮಾವೇಶ ನಡೆಯಲಿದೆ ಎಂದು ಕಿಶೋರ್ ಕುಮಾರ್ ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, “ಅಟಲ್ ಬಿಹಾರಿ ವಾಜಪೇಯಿ ಅವರು ರಾಷ್ಟ್ರ ಮತ್ತು ಸಂಘಟನೆಯಲ್ಲಿ ಮಾಡಿದ ಅಮೂಲ್ಯ ಕೊಡುಗೆಯನ್ನು ಸ್ಮರಿಸುವ ರೀತಿಯಲ್ಲಿ ಸಮಾವೇಶ ರೂಪುಗೊಂಡಿದೆ. ಪುತ್ತೂರು ಬಿಜೆಪಿ ಶಕ್ತಿಯ ಕೇಂದ್ರವಾಗಿದ್ದು, ಇಲ್ಲೇ ಅಟಲ್ ವಿರಾಸತ್ ಆಯೋಜಿಸಲು ಎಲ್ಲರೂ ಸಂಕಲ್ಪ ಮಾಡಿದ್ದಾರೆ. ಜನಸಂಘದ ಕಾಲದಿಂದ ಪಕ್ಷಕ್ಕಾಗಿ ಶ್ರಮಿಸಿದ ಹಿರಿಯರನ್ನು ಗೌರವಿಸುವ ಕಾರ್ಯಕ್ರಮವೂ ನಡೆಯಲಿದೆ,” ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಸುನಿಲ್ ಆಳ್ವ, ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಪಿ.ಬಿ, ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಉದ್ಯಮಿ ಸೀತಾರಾಮ ರೈ ಕೆದಂಬಾಡಿಗುತ್ತು, ಚಂದ್ರಶೇಖರ್ ರಾವ್ ಬಪ್ಪಳಿಗೆ ಮತ್ತಿತರರು ಉಪಸ್ಥಿತರಿದ್ದರು.



























