ಬಂಟ್ವಾಳ:
ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಕೇಪು ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿರುವ ಕುರಿತು ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯ ಪೊಲೀಸರು ದಿನಾಂಕ 20-12-2025 ರಂದು ಮಧ್ಯಾಹ್ನ ಧಾಳಿ ನಡೆಸಿದ್ದಾರೆ.
ಕೇಪು ಗ್ರಾಮದ ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಕಾನೂನುಬಾಹಿರವಾಗಿ ಕೋಳಿ ಅಂಕ ನಡೆಸಲು ಜನರು ಸೇರಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ, ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಹಲವರು ಕೋಳಿ ಅಂಕಕ್ಕೆ ಬಳಸುವ ಕೋಳಿಗಳನ್ನು ಹಿಡಿದುಕೊಂಡು ಗುಂಪು ಸೇರಿರುವುದು ಕಂಡುಬಂದಿದೆ.
ಪೊಲೀಸರು ಸ್ಥಳದಲ್ಲಿದ್ದ ಜನರಿಗೆ ಅಕ್ರಮ ಕೋಳಿ ಅಂಕದ ಬಗ್ಗೆ ಕಾನೂನು ತಿಳುವಳಿಕೆ ನೀಡುತ್ತಿದ್ದ ಸಂದರ್ಭದಲ್ಲೇ, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರು ಸ್ಥಳಕ್ಕೆ ಆಗಮಿಸಿ, ಅಲ್ಲಿ ಸೇರಿದ್ದ ಜನರಿಗೆ ಕಾನೂನುಬಾಹಿರ ಕೋಳಿ ಅಂಕವನ್ನು ಮುಂದುವರಿಸಲು ಪ್ರಚೋದನೆ ಮತ್ತು ದುಷ್ಪ್ರೇರಣೆ ನೀಡಿದ ಆರೋಪ ಕೇಳಿಬಂದಿದೆ. ಇದರಿಂದ ಪ್ರೇರಿತರಾದ ಜನರು ಕೋಳಿ ಅಂಕ ಆಟವನ್ನು ಪ್ರಾರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ತಕ್ಷಣ ಕ್ರಮ ಕೈಗೊಂಡ ವಿಟ್ಲ ಪೊಲೀಸರು ಅಗತ್ಯ ಪೊಲೀಸ್ ಭದ್ರತೆಯನ್ನು ಏರ್ಪಡಿಸಿ, ಅಕ್ರಮವಾಗಿ ಕೋಳಿ ಅಂಕ ಆಟದಲ್ಲಿ ತೊಡಗಿದ್ದ 16 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ, ಕೋಳಿ ಅಂಕಕ್ಕೆ ಬಳಸಲಾಗುತ್ತಿದ್ದ 22 ಹುಂಜ ಕೋಳಿಗಳು ಹಾಗೂ ಬಾಳು (ಕತ್ತಿಗಳು)ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಯಾವುದೇ ಸೂಕ್ತ ಪರವಾನಿಗೆ ಪಡೆಯದೇ ತಮ್ಮ ಜಾಗದಲ್ಲಿ ಕಾನೂನುಬಾಹಿರ ಚಟುವಟಿಕೆಗೆ ಅವಕಾಶ ಮಾಡಿಕೊಟ್ಟ ಆರೋಪದಡಿ ಜಮೀನಿನ ಮಾಲೀಕ ಮುರಳೀಧರ ರೈ ಹಾಗೂ ಅಕ್ರಮ ಕೃತ್ಯಕ್ಕೆ ಪ್ರಚೋದನೆ ನೀಡಿದ ಆರೋಪದಡಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ.ಸಂ. 190/2025 ಅಡಿ ಭಾರತೀಯ ನ್ಯಾಯ ಸಂಹಿತೆ–2023ರ ಕಲಂಗಳು 189(2), 49, 221, 223, 190 ಹಾಗೂ Prevention of Cruelty to Animals Act, 1960 ರ ಕಲಂ 3 ಮತ್ತು 11 ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

























