ಮುಲ್ಕಿ: ಮುಲ್ಕಿಯ ವಿಜಯ ಸನ್ನಿಧಿ ಜಂಕ್ಷನ್ ಬಳಿ ಸ್ಕೂಟರ್ ನಿಯಂತ್ರಣ ಕಳೆದುಕೊಂಡು ರಸ್ತೆಬದಿ ನಿಲ್ಲಿಸಿದ ಗೂಡ್ಸ್ ವಾಹನಕ್ಕೆ ಡಿಕ್ಕಿಯಾಗಿ ಗಾಯಗೊಂಡ ಮಹಿಳಾ ಪೊಲೀಸ್ ಸಿಬ್ಬಂದಿಯೋರ್ವರನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಪೊಲೀಸ್ ಸಿಬ್ಬಂದಿ ರೇಣುಕಾ ಅವರು ಮಧ್ಯಾಹ್ನ ಮನೆಗೆ ಊಟಕ್ಕೆ ತೆರಳುತ್ತಿದ್ದರು. ಈ ವೇಳೆ ಅವರ ಸ್ಕೂಟರ್ ನಿಯಂತ್ರಣಕ್ಕೆ ಸಿಗದೇ ಇದ್ದುದರಿಂದ ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಗಾಡಿಗೆ ಡಿಕ್ಕಿಯಾಗಿದೆ.
ಈ ಸಂದರ್ಭ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಗಾಯಗೊಂಡ ರೇಣುಕಾ ಅವರನ್ನು ತಮ್ಮ ಕಾರಿನಲ್ಲೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಮುಲ್ಕಿ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮಾನವೀಯ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.