ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಅಪಹರಣ ಹಾಗೂ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ತನಿಖೆಯಲ್ಲಿ ಮಹತ್ವದ ತಿರುವು ಕಂಡುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶೀಲಿಸಲಾದ ಸಿಸಿಟಿವಿ ದೃಶ್ಯಗಳಲ್ಲಿ ದೂರಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ವಾಹನ ಸಂಚರಿಸಿರುವುದು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ವೈದ್ಯಕೀಯ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಗೆ ಉಂಟಾಗಿದ್ದ ಗಾಯವು ಪ್ರಥಮ ಹಂತದಲ್ಲಿ ಸ್ವಯಂ ಉಂಟುಮಾಡಿಕೊಂಡ ಗಾಯ (Self Inflicted Wound) ಎಂದು ದೃಢಪಟ್ಟಿದೆ. ಬಳಿಕ ಬಾಲಕಿಯ ಹೇಳಿಕೆಯನ್ನು ಮತ್ತೊಮ್ಮೆ ದಾಖಲಿಸಿದಾಗ, ಈ ಘಟನೆಯ ಕುರಿತು ತಾನು ಸುಳ್ಳು ಹೇಳಿಕೆ ನೀಡಿದ್ದೆನೆಂದು ಬಾಲಕಿ ಒಪ್ಪಿಕೊಂಡಿದ್ದಾಳೆ.
ಬಾಲಕಿ ಅಪ್ರಾಪ್ತೆಯಾಗಿರುವ ಹಿನ್ನೆಲೆಯಲ್ಲಿ, ಆಕೆಯ ಹಿತದೃಷ್ಟಿಯಿಂದ ಪ್ರಕರಣವನ್ನು ಸೂಕ್ಷ್ಮವಾಗಿ ಪರಿಗಣಿಸಲಾಗುತ್ತಿದ್ದು, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ (CDPO) ಅವರ ಮೂಲಕ ಬಾಲಕಿಗೆ ಕೌನ್ಸೆಲಿಂಗ್ ನೀಡಲಾಗುವುದು. ಇದರ ಜೊತೆಗೆ ಮುಂದಿನ ಕಾನೂನು ಕ್ರಮಗಳ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದಲ್ಲದೆ, ಅಪ್ರಾಪ್ತ ಬಾಲಕಿಗೆ ವಾಹನ ಚಲಾಯಿಸಲು ಅವಕಾಶ ನೀಡಿದ ಕುರಿತು ಸಂಬಂಧಿಸಿದ ವ್ಯಕ್ತಿಗಳ ವಿರುದ್ಧವೂ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದಾಗಿ ಪೊಲೀಸರು ತಿಳಿಸಿದ್ದಾರೆ.

























