ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಸಮುದಾಯ ಸೇವೆ ಸಲ್ಲಿಸಿದ್ದ ಯುವಕನೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ಕಾರಣ ಬೇಸರಗೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಸುಳ್ಯದ ನಿವಾಸಿ ರಕ್ಷಿತ್ ಜಿ (29) ಅವರು ಮೂರು ಪ್ರತ್ಯೇಕ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ನ್ಯಾಯಾಲಯದಿಂದ 15 ದಿನಗಳ ಸಮುದಾಯ ಸೇವೆಗೆ ಗುರಿಯಾಗಿದ್ದರು. ನ್ಯಾಯಾಲಯದ ಆದೇಶದಂತೆ ಅವರು ಮಾರ್ಚ್ 15ರಂದು ಸಾರ್ವಜನಿಕರಿಗೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವ ಹಾಗೂ ನಿಯಂತ್ರಣ ಕಾರ್ಯವನ್ನು ಸಮುದಾಯ ಸೇವೆಯ ಭಾಗವಾಗಿ ನಿರ್ವಹಿಸಿದ್ದರು.
ಈ ವೇಳೆ ಅವರು ಸಮುದಾಯ ಸೇವೆ ಸಲ್ಲಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಮನೆಯಲ್ಲಿದ್ದ ವೇಳೆ ಈ ವಿಚಾರ ಗಮನಿಸಿದ ರಕ್ಷಿತ್ ಜಿ ಅವರು ಇದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.
ತಕ್ಷಣ ಅವರನ್ನು ಚಿಕಿತ್ಸೆಗಾಗಿ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
























