ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕೇಳ್ಳರ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ನದಿಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸುಣ್ಣತ್ ಕೆರೆ ನಿವಾಸಿ ಇರ್ಫಾನ್ (19) ಎಂದು ಗುರುತಿಸಲಾಗಿದೆ. ಅವರು ಮಾ. 21ರಂದು ಸಂಜೆ ಸುಮಾರು 4 ಗಂಟೆಯ ವೇಳೆ ಸ್ನಾನಕ್ಕಾಗಿ ನದಿಗೆ ಇಳಿದಾಗ ಅಕಸ್ಮಿಕವಾಗಿ ನೀರಿನ ಬಲವಾದ ಸೆಳೆತಕ್ಕೆ ಸಿಲುಕಿದ್ದಾರೆ.
ಇದನ್ನು ಗಮನಿಸಿದ ಸ್ಥಳೀಯ ಯುವಕರು ತಕ್ಷಣ ರಕ್ಷಣಾ ಕಾರ್ಯಕ್ಕೆ ಮುಂದಾಗಿ, ಇರ್ಫಾನ್ ಅವರನ್ನು ನೀರಿನಿಂದ ಹೊರತೆಗೆದಿದ್ದಾರೆ. ಬಳಿಕ ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ವೇಣೂರು ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಈ ಘಟನೆ ಸ್ಥಳೀಯರಲ್ಲಿ ಶೋಕಮಯ ವಾತಾವರಣ ನಿರ್ಮಿಸಿದೆ.



























