ಮುಕ್ಕೂರು : ಕೊಡಂಗೆ ನಿವಾಸಿ ರಕ್ಷಿತಾ ಕೆ ಅವರು ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳಾ ಹಾಕಿ ಟೂರ್ನಿ–2026ಕ್ಕೆ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಎಸಿಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅವರು ಆಯ್ಕೆಯಾಗಿದ್ದು, ಇದೀಗ ರಾಷ್ಟ್ರೀಯ ಮಟ್ಟದ ಟೂರ್ನಿಯಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈಕೆ ಜಯಂತ ಪೂಜಾರಿ ಕೊಡಂಗೆ ಮತ್ತು ರೇವತಿ ದಂಪತಿಯ ಪುತ್ರಿ.
ರಕ್ಷಿತಾ ಅವರು ಮಂಗಳೂರಿನ ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ತೃತೀಯ ವರ್ಷದ ವಿದ್ಯಾರ್ಥಿನಿಯಾಗಿದ್ದಾರೆ.
ಕ್ರೀಡೆಯಲ್ಲಿ ಬಾಲ್ಯದಿಂದಲೇ ಆಸಕ್ತಿ ಹೊಂದಿದ್ದ ಅವರು 2017ರಲ್ಲಿ 7ನೇ ತರಗತಿಯಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದರು. ಬಳಿಕ ಚಿಕ್ಕಮಗಳೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದರು. ತಂಡದ ನಾಯಕಿಯಾಗಿಯೂ ಕಾರ್ಯನಿರ್ವಹಿಸಿದ್ದರು.
ಪ್ರಸ್ತುತ ಕಾಲೇಜು ಮಟ್ಟದಲ್ಲಿಯೂ ಕಬಡ್ಡಿ, ಹಾಕಿ, ಫುಟ್‌ಬಾಲ್ ಹಾಗೂ ಬಾಸ್ಕೆಟ್‌ಬಾಲ್ ಕ್ರೀಡೆಗಳಲ್ಲಿ ಸಕ್ರಿಯರಾಗಿರುವ ಅವರು, ಫುಟ್‌ಬಾಲ್‌ನ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಸಾಧನೆಯನ್ನೂ ಮಾಡಿದ್ದಾರೆ. ಈಕೆ ಮುಕ್ಕೂರು ನೇಸರ ಯುವತಿ ಮಂಡಲದ ಸದಸ್ಯೆಯಾಗಿದ್ದಾರೆ.


























