ಬಂಟ್ವಾಳ ತಾಲೂಕಿನ ಮೆಲ್ಕಾರ್‌ನಲ್ಲಿ ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿಯಲ್ಲಿದ್ದ ಗುಜುರಿ ಸಾಮಗ್ರಿಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಬೆಂಗಳೂರು ಮೂಲದ ಈ ಲಾರಿ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಮೆಲ್ಕಾರ್ ಪ್ರದೇಶದಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡು ಬಳಿಕ ಬೆಂಕಿ ವ್ಯಾಪಿಸಿದೆ ಎನ್ನಲಾಗಿದೆ. ಲಾರಿಯಲ್ಲಿ ಗುಜುರಿ ಸಾಮಗ್ರಿಗಳನ್ನು ಸಾಗಿಸಲಾಗುತ್ತಿದ್ದು, ಅವು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳೀಯರು ಕೂಡ ಅಗ್ನಿಶಾಮಕ ಸಿಬ್ಬಂದಿಗೆ ಸಹಕಾರ ನೀಡಿದರು.
ಪ್ರಾಥಮಿಕ ಮಾಹಿತಿಯ ಪ್ರಕಾರ, ಗುಜುರಿ ಸಾಮಗ್ರಿಗಳ ನಡುವೆ ಇದ್ದ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿರುವ ಸಾಧ್ಯತೆಯಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ಪರಿಶೀಲನೆ ನಡೆಯುತ್ತಿದೆ.



























