ಪುತ್ತೂರು: ಪುತ್ತೂರು–ಮಾಣಿ ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಮಹಿಂದ್ರಾ ಪಿಕಪ್ ವಾಹನ ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೂಲತಃ ಮುಕ್ವೆ ಮಣಿಯ ನಿವಾಸಿಯಾಗಿದ್ದು, ಪ್ರಸ್ತುತ ಕಬಕದಲ್ಲಿ ವಾಸವಾಗಿದ್ದ ಸಲೀಂ (52) ಮೃತರು. ಅವರು ಸೋಫಾ ಹಾಗೂ ವಾಹನಗಳ ಕುಶನ್ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಸಲೀಂ ಅವರು ಮಿತ್ತೂರಿನ ದಾರುಲ್ ಇಸ್ಲಾಂ ಶಿಕ್ಷಣ ಸಂಸ್ಥೆಯ ವಾಹನದ ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕಬಕ ಕಡೆಯಿಂದ ಮಿತ್ತೂರು ಕಡೆಗೆ ಅತಿವೇಗದಲ್ಲಿ ಬಂದ ಮಹಿಂದ್ರಾ ಪಿಕಪ್ ವಾಹನವು ಸಲೀಂ ಅವರು ಚಲಾಯಿಸುತ್ತಿದ್ದ ಆಕ್ಟಿವಾ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ಸಲೀಂ ಅವರು ರಸ್ತೆಗೆ ಬಿದ್ದಿದ್ದು, ಹೆಲ್ಮೆಟ್ ಧರಿಸಿದ್ದರೂ ತಲೆ, ಕೈ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯರು ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.


























