ಬಂಟ್ವಾಳ: ಅಕ್ರಮವಾಗಿ ಜಾನುವಾರು ಸಾಗಣೆ ಮಾಡುತ್ತಿದ್ದ ಪಿಕ್‌ಅಪ್ ವಾಹನವನ್ನು ವಿಟ್ಲ ಪೊಲೀಸರು ಪತ್ತೆಹಚ್ಚಿ, ಚಾಲಕನನ್ನು ವಶಕ್ಕೆ ಪಡೆದ ಘಟನೆ ಬುಧವಾರ ಬೆಳಿಗ್ಗೆ ಬಂಟ್ವಾಳ ತಾಲೂಕಿನ ಕೊಳ್ನಾಡು ಪಂಜರಕೋಡಿ ಪ್ರದೇಶದಲ್ಲಿ ನಡೆದಿದೆ.
ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು (ಕಾ&ಸು) ರಾಮಕೃಷ್ಣ ಅವರಿಗೆ ಅಕ್ರಮ ಗೋಸಾಗಣೆ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ KA-19-D-1496 ಸಂಖ್ಯೆಯ ಪಿಕ್‌ಅಪ್ ವಾಹನವನ್ನು ತಡೆದು ಪರಿಶೀಲಿಸಿದರು.
ಈ ವೇಳೆ ಪಿಕ್‌ಅಪ್ ವಾಹನಕ್ಕೆ ಬೆಂಗಾವಲಾಗಿ ಬಂದಿದ್ದ KA-21-MA-0801 ಸಂಖ್ಯೆಯ ಸ್ವಿಫ್ಟ್ ಕಾರಿನಲ್ಲಿದ್ದ ಆರೋಪಿ ಬಶೀರ್, ಸ್ಥಳದಲ್ಲಿದ್ದ ಪೊಲೀಸರ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ಕಾರು ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಪೊಲೀಸರು ಪಿಕ್‌ಅಪ್ ವಾಹನವನ್ನು ಪರಿಶೀಲಿಸಿದಾಗ ಎರಡು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಸಾಗಿಸಲಾಗುತ್ತಿರುವುದು ಪತ್ತೆಯಾಯಿತು. ವಾಹನ ಚಾಲಕ ಬಂಟ್ವಾಳ ತಾಲೂಕಿನ ಬಾಳೆಪುಣಿ ನಿವಾಸಿ ಮೊಹಮ್ಮದ್ ಹನೀಪ್ (44) ಅವರನ್ನು ವಿಚಾರಿಸಿದಾಗ, ಯಾವುದೇ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ವಧೆ ಉದ್ದೇಶಕ್ಕಾಗಿ ಸಾಗಿಸುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು, ಕೃತ್ಯಕ್ಕೆ ಬಳಸಿದ ವಾಹನ ಹಾಗೂ ಎರಡು ಜಾನುವಾರುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಸಂಬಂಧ ಮೊಹಮ್ಮದ್ ಹನೀಪ್ ಮತ್ತು ಬಶೀರ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ.114/2026 ಪ್ರಕರಣ ದಾಖಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 118(1), 109, 132 ಹಾಗೂ 3(5), ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಮತ್ತು ಸಂರಕ್ಷಣಾ ಅಧಿನಿಯಮ 2020ರ ಕಲಂ 5, 7, 12 ಮತ್ತು ಪ್ರಿವೆನ್ಷನ್ ಆಫ್ ಕ್ರುಯೆಲ್ಟಿ ಟು ಅನಿಮಲ್ಸ್ ಆಕ್ಟ್ 1960ರ ಕಲಂ 11ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.



























