ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಉಚ್ಚಿಲ್ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೈನ್ ಅಲಿಯಾಸ್ “ಟ್ಯಾಬ್ಲೆಟ್ ಆರೀಫ್” ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮೊಹಮ್ಮದ್ ಇಬ್ರಾಹಿಂ ಸಿನಾನ್ @ ಚಿನ್ನು (21) ಎಂದು ಗುರುತಿಸಲಾಗಿದೆ. ಇವನು ಶಾಂತಿನಗರ, ಸಿರಿಸೀಮೆ ನರ್ಸರಿ ಸಮೀಪ, ಬಜಾಲ್ ನಂತೂರು, ಪಡೀಲ್ ನಿವಾಸಿಯಾಗಿದ್ದು, ಪ್ರಸ್ತುತ ವಿಜಯನಗರದ ರೈಲ್ವೇ ಸ್ಟೇಷನ್ ಹಿಂಭಾಗದ ಬಾಡಿಗೆ ಮನೆಯಲ್ಲಿ ವಾಸವಿದ್ದನು.
ಮಾರ್ಚ್ 27, 2026ರ ಬೆಳಗಿನ ಜಾವ ತೊಕ್ಕೊಟ್ಟು ಫ್ಲೈಓವರ್ ಮೇಲಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಆರೀಫ್ ಮೇಲೆ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದರು. ಬಳಿಕ ಕೃತ್ಯಕ್ಕೆ ಬಳಸಿದ್ದ ಕಾರನ್ನು ಬಂಟ್ವಾಳ ತಾಲೂಕಿನ ಬುಡೋಳಿ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿದ್ದರು. ಈ ಸಂಬಂಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಸಿಸಿಬಿಗೆ ಹಸ್ತಾಂತರಿಸಲಾಗಿತ್ತು.
ಪೊಲೀಸ್ ತನಿಖೆಯ ಪ್ರಕಾರ, ಸಿನಾನ್ ಫೆಬ್ರವರಿ ತಿಂಗಳಲ್ಲಿ ನಡೆದ ಕೊಲೆ ಸಂಚು ಸಭೆಯಲ್ಲಿ ಭಾಗಿಯಾಗಿದ್ದನು. ಅಲ್ಲದೆ, ಕೊಲೆ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳಿಗೆ ಹಣಕಾಸಿನ ನೆರವು ನೀಡಿರುವುದು ಬೆಳಕಿಗೆ ಬಂದಿದೆ. ಈತ ಮೃತ ರೌಡಿಶೀಟರ್ “ಟೊಪ್ಪಿ ನೌಫಾಲ್”ನ ಸಹೋದರನಾಗಿದ್ದಾನೆ ಎನ್ನಲಾಗಿದೆ.
ಬಂಧಿತನ ವಿರುದ್ಧ ಈಗಾಗಲೇ 2025ರಲ್ಲಿ ಕಂಕನಾಡಿ ನಗರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ಹಾಗೂ 2024ರಲ್ಲಿ ಮಂಗಳೂರು ಉತ್ತರ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿವೆ.
ಈ ಪ್ರಕರಣದಲ್ಲಿ ಈಗಾಗಲೇ 11 ಮಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಎಲ್ಲ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ವಿರುದ್ಧ “ಕೋಕಾ ಕಾಯಿದೆ” ಅಡಿಯಲ್ಲಿ ತನಿಖೆ ಮುಂದುವರಿದಿದೆ.



























