ಮಂಗಳೂರು: ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಕೇರಳ ರಾಜ್ಯದ ಕಾಂಞಿಗಾಡ್ ಪ್ರದೇಶದಲ್ಲಿ ಬಂಧಿಸಿದ್ದಾರೆ.
ಘಟನೆ ಮೇ 24, 2026ರಂದು ಬೆಳಗಿನ ಜಾವ ಸುಮಾರು 2:10 ಗಂಟೆಗೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್‌ನ ನಾರಾಯಣಗುರು ಸಮುದಾಯ ಭವನ ರಸ್ತೆಯ ಎದುರು ನಡೆದಿದೆ. ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಬಳಿ ಕೆಂಪು ಬಣ್ಣದ ಎಲೆಕ್ಟ್ರಿಕಲ್ ಸ್ಕೂಟರ್‌ನಲ್ಲಿ ಬಂದಿದ್ದ ಇಬ್ಬರು ಯುವಕರಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಏಕಾಏಕಿ ಸಿಮೆಂಟ್ ಶೀಟ್ ತುಂಡಿನಿಂದ ಪೊಲೀಸ್ ಸಿಬ್ಬಂದಿಯ ತಲೆಗೆ ಹಲ್ಲೆ ನಡೆಸಿದ್ದಾನೆ. ಪರಿಣಾಮವಾಗಿ ಸಿಬ್ಬಂದಿಗೆ ಗಾಯಗಳಾಗಿದ್ದು, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಯತ್ನ ನಡೆಸಿದ ಆರೋಪದಡಿ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೊಂಡ ಸಿಸಿಬಿ ಪೊಲೀಸರು ದೊರೆತ ಖಚಿತ ಮಾಹಿತಿಯ ಆಧಾರದಲ್ಲಿ ಆರೋಪಿಗಳನ್ನು ಮೇ 26ರಂದು ಕೇರಳದ ಕಾಂಞಿಗಾಡ್‌ನಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಉರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಪ್ರಕರಣದಲ್ಲಿ ಬಳಸಿದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ.
ಬಂಧಿತ ಆರೋಪಿಗಳನ್ನು ಸಚಿನ್ ಕೆ ಆರ್ (24) ಹಾಗೂ ಚಂದನ್ (24) ಎಂದು ಗುರುತಿಸಲಾಗಿದೆ. ಸಚಿನ್ ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ನಿವಾಸಿಯಾಗಿದ್ದು, ಮಂಗಳೂರಿನ ಕುಂಟಿಕಾನದಲ್ಲಿರುವ PON PON Sweets ಫ್ಯಾಕ್ಟರಿಯಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದನು. ಮತ್ತೊಬ್ಬ ಆರೋಪಿ ಚಂದನ್ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿಯಾಗಿದ್ದು, ಕೂಳೂರಿನ ಅದ್ವೈತ್ ಕಿಯಾ ಶೋರೂಮ್‌ನಲ್ಲಿ ಟೆಕ್ನಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದನು.
ಆರೋಪಿಗಳು ಮಂಗಳೂರಿನ ಅಶೋಕನಗರದ ಫಲ್ಗುಣಿ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮಧ್ಯರಾತ್ರಿ ವೇಳೆ ನಗರದಲ್ಲಿ ಸುತ್ತಾಡುತ್ತಿದ್ದ ಆರೋಪಿಗಳನ್ನು ಬೀಟ್ ಪೊಲೀಸರು ತಡೆದು ಪ್ರಶ್ನಿಸಿದ ವೇಳೆ ಉಂಟಾದ ವಾಗ್ವಾದದ ಹಿನ್ನೆಲೆ ಪೊಲೀಸರ ಮೇಲೆ ಹಲ್ಲೆ ನಡೆಸಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.



























