ಮಂಗಳೂರು, ಮೇ 28: ಮಂಗಳೂರಿನಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠವನ್ನು ಸ್ಥಾಪಿಸುವಂತೆ ಕೋರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಭಾರತ ಸರ್ಕಾರದ ಕಾನೂನು ಮತ್ತು ನ್ಯಾಯ ಸಚಿವಾಲಯದ ರಾಜ್ಯ ಸಚಿವ ಶ್ರೀ ಅರ್ಜುನ್ ರಾಮ್ ಮೇಘವಾಲ್ ಅವರಿಗೆ ಪತ್ರ ಬರೆದಿದ್ದಾರೆ.
ಪ್ರಸ್ತುತ ಬೆಂಗಳೂರಿನ ಕರ್ನಾಟಕ ಹೈಕೋರ್ಟ್‌ನಲ್ಲಿ ಇರುವ ಒಟ್ಟು ಪ್ರಕರಣಗಳಲ್ಲಿ ಸುಮಾರು 30 ಶೇಕಡಾ ಪ್ರಕರಣಗಳು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಸಂಬಂಧಪಟ್ಟಿವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಈ ಭಾಗದ ಜನರು ನ್ಯಾಯಕ್ಕಾಗಿ ಸುಮಾರು 370 ಕಿಲೋಮೀಟರ್ ದೂರದ ಬೆಂಗಳೂರಿಗೆ ತೆರಳಬೇಕಾಗಿರುವುದು ಸಾಮಾನ್ಯ ಜನತೆಗೆ ಆರ್ಥಿಕ ಹಾಗೂ ಸಮಯದ ಭಾರವನ್ನು ಉಂಟುಮಾಡುತ್ತಿದೆ. ಆದ್ದರಿಂದ ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠವನ್ನು ಸ್ಥಾಪಿಸುವುದು ಅಗತ್ಯವಾಗಿದೆ ಎಂದು ಸಂಸದರು ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕದ ಎರಡನೇ ಅತಿ ದೊಡ್ಡ ಆರ್ಥಿಕ ಕೇಂದ್ರವಾಗಿ ಬೆಳೆಯುತ್ತಿರುವ ಮಂಗಳೂರಿನ ಅಭಿವೃದ್ಧಿಗೆ ನ್ಯಾಯಾಂಗ ವಿಕೇಂದ್ರೀಕರಣ ಪೂರಕವಾಗಲಿದೆ. ಇದರಿಂದ ಕರಾವಳಿ ಹಾಗೂ ಮಲೆನಾಡು ಭಾಗದ ಜನರಿಗೆ ವೇಗವಾದ ಮತ್ತು ಸುಲಭ ನ್ಯಾಯ ದೊರಕುವಂತಾಗಲಿದೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವ ಕುರಿತು ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮನವಿ ಮಾಡಿದ್ದಾರೆ.



























