ಬಂಟ್ವಾಳ: ಅಕ್ರಮ ಗೋಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯು ಮಹತ್ವದ ಕ್ರಮ ಕೈಗೊಂಡಿದ್ದು, ಕೃತ್ಯ ನಡೆದ ಸ್ಥಳವಾದ ಮನೆ ಹಾಗೂ ದನದ ಕೊಟ್ಟಿಗೆಯನ್ನು ಜಪ್ತಿ ಮಾಡಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಕ್ರಮಾಂಕ 68/2026ರ ಪ್ರಕರಣದಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಕಲಂ 4, 7 ಹಾಗೂ 12ರಡಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆಯ ಭಾಗವಾಗಿ ಬಂಟ್ವಾಳ ತಾಲೂಕಿನ ಸಜೀಪ ಮೂಡಾ ಗ್ರಾಮದ ಕೊಳಕೆ ಪಂಜಾಜೆ ಪ್ರದೇಶದಲ್ಲಿರುವ ಆರೋಪಿ ಮುಸ್ತಫಾ ಬಾಬ್ತು ಅವರ ಮನೆ ಹಾಗೂ ದನದ ಕೊಟ್ಟಿಗೆಯನ್ನು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಕಲಂ 8(1)ರ ಅನ್ವಯ ಜಪ್ತಿ ಮಾಡಲಾಗಿದೆ.
ಜಪ್ತಿ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಮಂಗಳೂರು ಉಪವಿಭಾಗದ ಮಾನ್ಯ ಉಪ ವಿಭಾಗೀಯ ದಂಡಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.


























