ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಕಾರ್ಯಾಚರಣೆಯಲ್ಲಿ ಇಬ್ಬರು ಅಂತರರಾಜ್ಯ ಕಳ್ಳರನ್ನು ಬಂಧಿಸಲಾಗಿದ್ದು, ಅವರಿಂದ ಕಳವು ಮಾಡಿದ ಚಿನ್ನಾಭರಣ, ನಗದು ಹಾಗೂ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ನಿವಾಸಿ ಡಿ. ಮುರಳಿ ಅವರ ಮನೆಯಲ್ಲಿ 2026ರ ಏಪ್ರಿಲ್ 5ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಅಪರಾಧ ಪತ್ತೆ ತಂಡವು ಮೇ 15ರಂದು ಹಮೀದ್ @ ಅಬ್ದುಲ್ ಹಮೀದ್ ಎಂಬಾತನನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಆಲ್ಟೋ ಕಾರನ್ನು ವಶಪಡಿಸಿಕೊಂಡಿತ್ತು.
ಆತನಿಂದ ದೊರೆತ ಮಾಹಿತಿಯ ಮೇರೆಗೆ ಜೂನ್ 7ರಂದು ಇನ್ನೋರ್ವ ಆರೋಪಿ ಅಬ್ದುಲ್ ಜಾಬೀರ್ @ ಜಾಬಿಯನ್ನು ಬಂಧಿಸಲಾಗಿದೆ. ಬಂಧಿತರಿಂದ ಪುಂಜಾಲಕಟ್ಟೆ ಠಾಣೆ ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 68.690 ಗ್ರಾಂ ಚಿನ್ನಾಭರಣ, ₹2 ಲಕ್ಷ ನಗದು, ಉಪ್ಪಿನಂಗಡಿ ಠಾಣೆ ಪ್ರಕರಣಕ್ಕೆ ಸಂಬಂಧಿಸಿದ 21.810 ಗ್ರಾಂ ಚಿನ್ನಾಭರಣ ಹಾಗೂ ಮಾರುತಿ ಸ್ವಿಫ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ಸುಮಾರು ₹20.67 ಲಕ್ಷ ಎಂದು ಅಂದಾಜಿಸಲಾಗಿದೆ. ಆರೋಪಿಗಳು ಕೇರಳ ರಾಜ್ಯ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ, ಬೆಳ್ತಂಗಡಿ ಹಾಗೂ ಬಂಟ್ವಾಳ ನಗರ ಠಾಣಾ ವ್ಯಾಪ್ತಿಗಳಲ್ಲಿಯೂ ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿರುವ ಮಾಹಿತಿ ಲಭ್ಯವಾಗಿದ್ದು, ತನಿಖೆ ಮುಂದುವರಿದಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ಅರುಣ್ ಕೆ. ಐಪಿಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮಾರೆಡ್ಡಿ ಅವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಅಧಿಕಾರಿಗಳ ನೇತೃತ್ವದ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.


























