ಸಂಪಾಜೆ:ಕೊಡಗು ಜಿಲ್ಲೆಯ ಸಂಪಾಜೆ ಚೆಕ್‌ಪೋಸ್ಟ್ ಸಮೀಪ ಕೆ.ಎಸ್.ಆರ್.ಟಿ.ಸಿ ಐರಾವತ ಬಸ್ ಹಾಗೂ ಕಿಯಾ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಮಡಿಕೇರಿಯಿಂದ ಸುಳ್ಯ ಕಡೆಗೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಐರಾವತ ಬಸ್ ಸಂಪಾಜೆ ಚೆಕ್‌ಪೋಸ್ಟ್ ಬಳಿ ತಲುಪಿದ ವೇಳೆ ಚಾಲಕ ಬ್ರೇಕ್ ಹಾಕಿದರೂ, ನಿರಂತರ ಮಳೆಯಿಂದ ರಸ್ತೆ ಜಾರುವ ಸ್ಥಿತಿಯಲ್ಲಿದ್ದ ಕಾರಣ ಬಸ್ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ. ಈ ವೇಳೆ ಕೊಯನಾಡು ಕಡೆಯಿಂದ ಬರುತ್ತಿದ್ದ ಕಿಯಾ ಕಾರಿಗೆ ಬಸ್ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ಪರಿಣಾಮ ಬಸ್ ಹಾಗೂ ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು, ಎರಡೂ ವಾಹನಗಳು ಜಖಂಗೊಂಡಿವೆ. ಘಟನೆಯ ವೇಳೆ ಬಸ್‌ನಲ್ಲಿದ್ದ ಪ್ರಯಾಣಿಕರು ಹಾಗೂ ಕಾರಿನಲ್ಲಿದ್ದವರು ಯಾವುದೇ ಗಂಭೀರ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಅಪಘಾತದ ಬಳಿಕ ಕೆಲಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು, ಸ್ಥಳೀಯರು ಮತ್ತು ಸಂಬಂಧಿತ ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.



























