ಮಂಗಳೂರು: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA)ಯನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕುಲಶೇಖರದ ಸಿಲ್ವರ್ ಗೇಟ್ ನಿವಾಸಿ 29 ವರ್ಷದ ಜನನ್ ಜಗನ್ನಾಥ್ ಹಾಗೂ ಬೋಳಾರದ 33 ವರ್ಷದ ಪರೀಕ್ಷಿತ್ ಎಂದು ಗುರುತಿಸಲಾಗಿದೆ.
ಜೂನ್ 8ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಗೂಡ್ ಶೆಡ್ ಪರಿಸರದಲ್ಲಿ ಎಂಡಿಎಂಎ ಮಾರಾಟ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಆರೋಪಿಗಳಿಂದ 11.68 ಗ್ರಾಂ ಎಂಡಿಎಂಎ, ₹1,110 ನಗದು, ಮೂರು ಮೊಬೈಲ್ ಫೋನ್‌ಗಳು ಹಾಗೂ ಒಂದು ತೂಕ ಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 122/2026ರಡಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ) ಮತ್ತು 22(ಸಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


























