ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 2018ರಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪುತ್ತೂರು ನಗರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 53/2018ರಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 448, 506, 354 ಹಾಗೂ ಪೋಕ್ಸೋ ಕಾಯ್ದೆಯ ಕಲಂ 12ರಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರು ನರಿಮೊಗರು ನಿವಾಸಿ ನಮನ್ ನಾಯಕ್ (32) ಎಂಬಾತನು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಆರೋಪಿಯ ಸುಳಿವು ಪತ್ತೆಹಚ್ಚಿದ ಪುತ್ತೂರು ನಗರ ಪೊಲೀಸ್ ತಂಡವು ಬೆಂಗಳೂರಿನ ಕೂಡ್ಲುಪೇಟೆ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.



























