ಕಡಬ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶುಶ್ರೂಷಕಿಗೆ ಸಹೋದ್ಯೋಗಿಯಿಂದ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ರೆಂಜಿಲಾಡಿ ನಿವಾಸಿಯಾಗಿದ್ದು, ಅವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಶುಶ್ರೂಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅದೇ ಆಸ್ಪತ್ರೆಯ ಔಷಧಿ ವಿಭಾಗದ ಮುಖ್ಯಸ್ಥನಾಗಿ ಕಾರ್ಯನಿರ್ವಹಿಸುತ್ತಿರುವ ಚಂದ್ರಶೇಖರ್ ಎಂಬವರು ಔಷಧಾಲಯದ ಉಗ್ರಾಣದಲ್ಲಿ ಪದೇ ಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಅಲ್ಲದೆ, ಈ ವಿಚಾರವನ್ನು ಇತರರೊಂದಿಗೆ ಹಂಚಿಕೊಂಡರೆ ಕೆಲಸದಿಂದ ತೆಗೆದುಹಾಕುವುದಾಗಿ ಬೆದರಿಕೆ ಹಾಕಿದ್ದರು ಎಂದು ಮಹಿಳಾ ಸಿಬ್ಬಂದಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ದೂರು ಸ್ವೀಕರಿಸಿದ ಬೆಳ್ತಂಗಡಿ ಪೊಲೀಸರು ಆರೋಪಿತ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.



























