ಸುಬ್ರಹ್ಮಣ್ಯ:ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ-ಬಿಸ್ಲೆ ರಸ್ತೆಯ ಡಿಪ್ಪೋ ಸಮೀಪ ಪಿಕಪ್ ವಾಹನ ಆಯತಪ್ಪಿ ಬಿದ್ದ ಘಟನೆ ಬೆಳಕಿಗೆ ಬಂದಿದ್ದು, ತನಿಖೆ ವೇಳೆ ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆಯಾಗಿದೆ.
KA-13 D 1923 ನೋಂದಣಿ ಸಂಖ್ಯೆಯ ಪಿಕಪ್ ವಾಹನ ಅಪಘಾತಕ್ಕೀಡಾದ ಹಿನ್ನೆಲೆಯಲ್ಲಿ ವಾಹನ ಹಾಗೂ ಅದರ ಚಾಲಕ ಚಂದ್ರು ಅಲಿಯಾಸ್ ಚಂದ್ರಶೇಖರ ಮತ್ತು ಕ್ಲೀನರ್ ಮೋಹನ್ ಅವರನ್ನು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಈ ವೇಳೆ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಪೊಲೀಸರು ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ಆರೋಪಿತರು ಯಾವುದೇ ಪರವಾನಗಿ ಇಲ್ಲದೆ ಎರಡು ಜಾನುವಾರುಗಳನ್ನು ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಹಿಂಸಾತ್ಮಕವಾಗಿ ವಾಹನದಲ್ಲಿ ಸಾಗಿಸುತ್ತಿದ್ದುದಾಗಿ ತಿಳಿದುಬಂದಿದೆ. ವಾಹನ ಅಪಘಾತಕ್ಕೀಡಾದ ಬಳಿಕ ಜಾನುವಾರುಗಳನ್ನು ವಾಹನದಿಂದ ಇಳಿಸಿ ಓಡಿಸಿರುವುದಾಗಿಯೂ ತನಿಖೆಯಲ್ಲಿ ಬಹಿರಂಗವಾಗಿದೆ.
ಪೊಲೀಸರು ಘಟನಾ ಸ್ಥಳದ ಸಮೀಪದಲ್ಲೇ ಎರಡು ಜಾನುವಾರುಗಳನ್ನು ಪತ್ತೆಹಚ್ಚಿ ರಕ್ಷಿಸಿದ್ದು, ಕೃತ್ಯಕ್ಕೆ ಬಳಸಿದ ವಾಹನ ಹಾಗೂ ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಆರೋಪಿಗಳ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಗೋವುಗಳ ಸಂರಕ್ಷಣಾ ಮತ್ತು ಜಾನುವಾರು ಪ್ರತಿಬಂಧಕ ಕಾಯ್ದೆ-2020ರ ಕಲಂ 4, 5, 7, 12, ಪ್ರಾಣಿ ಸಂರಕ್ಷಣಾ ಕಾಯ್ದೆ-1960ರ ಕಲಂ 11(1)(D) ಹಾಗೂ ಭಾರತೀಯ ಮೋಟಾರು ವಾಹನ ಕಾಯ್ದೆ-1988ರ ಕಲಂ 66 ಮತ್ತು 192(A) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

























