ಉಪ್ಪಿನಂಗಡಿ:ಕುಮಾರಧಾರ ನದಿಯ ಹಳೆ ಸೇತುವೆ ಸಮೀಪ ಮಾದಕ ವಸ್ತು ಸೇವಿಸಿ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದು, ಆತನಿಂದ 33 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಬೆಳ್ತಂಗಡಿ ತಾಲೂಕಿನ ಇಳಂತಿಲ ನಿವಾಸಿ ಮಹಮ್ಮದ್ ಶಾಫಿ (33) ಎಂದು ಗುರುತಿಸಲಾಗಿದೆ.
ಕುಮಾರಧಾರ ನದಿಯ ಹಳೆ ಸೇತುವೆ ಬಳಿ ವ್ಯಕ್ತಿಯೊಬ್ಬ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಸುತೇಶ್ ಕೆ.ಪಿ. ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ವೇಳೆ ಆರೋಪಿ ಸಿಕ್ಕಿಬಿದ್ದಿದ್ದು, ಆತನ ಬಳಿ ಇದ್ದ 33 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


























