ವಿಟ್ಲ, ಜೂನ್ 18: ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಇಂದು (ಗುರುವಾರ) ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಟಿಪ್ಪರ್ ಲಾರಿಯ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಧರ್ಮಸ್ಥಳ ಪರಿಸರದ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ.
ಲಭ್ಯ ಮಾಹಿತಿಯ ಪ್ರಕಾರ ಟಿಪ್ಪರ್ ಲಾರಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಇದನ್ನು ಸರಿಪಡಿಸುವ ಸಲುವಾಗಿ ಚಾಲಕ ಮಹೇಶ್ ಲಾರಿಯ ಕೆಳಗೆ ಇಳಿದು ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದರು. ಈ ವೇಳೆ ಏಕಾಏಕಿ ಲಾರಿ ಮುಂದಕ್ಕೆ ಚಲಿಸಿದ್ದು, ಮಹೇಶ್ ಲಾರಿಯ ಚಕ್ರಗಳ ಅಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಕಾರ್ಮಿಕರು ಹಾಗೂ ಕನ್ಯಾನದ ಸದ್ಗುರು ಅಂಬ್ಯುಲೆನ್ಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಜಂಟಿ ಕಾರ್ಯಾಚರಣೆ ನಡೆಸಿ ಲಾರಿಯ ಅಡಿಯಿಂದ ಮೃತದೇಹವನ್ನು ಹೊರತೆಗೆದರು.
ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಟ್ಲ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ.


























