ಪುತ್ತೂರು: ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ.) ವತಿಯಿಂದ, ವಿವೇಕಾನಂದ ಕಾಲೇಜು ಕ್ಯಾಂಪಸ್‌ಗೆ ಸಂಪರ್ಕ ಕಲ್ಪಿಸುವ ರೈಲ್ವೇ ಸಂಕದ ರಸ್ತೆಯನ್ನು ತುರ್ತಾಗಿ ದುರಸ್ತಿಗೊಳಿಸಿ ಡಾಮರೀಕರಣ ಮಾಡುವಂತೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಸಲಾಗಿದೆ.
ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪರವಾಗಿ ಸಲ್ಲಿಸಲಾದ ಮನವಿಯಲ್ಲಿ, ವಿವೇಕಾನಂದ ಕ್ಯಾಂಪಸ್‌ನ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಪ್ರಸ್ತುತ ಹದಗೆಟ್ಟು ಹಲವೆಡೆ ದೊಡ್ಡ ಗುಂಡಿಗಳು ಉಂಟಾಗಿರುವುದಾಗಿ ತಿಳಿಸಲಾಗಿದೆ. ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಈ ರಸ್ತೆಯನ್ನು ಬಳಸುತ್ತಿದ್ದು, ರಸ್ತೆಯ ದುಸ್ಥಿತಿಯಿಂದ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಮಳೆಗಾಲದಲ್ಲಿ ರಸ್ತೆ ಗುಂಡಿಗಳಲ್ಲಿ ನೀರು ನಿಂತು ಅಪಘಾತಗಳ ಸಂಭವ ಹೆಚ್ಚಾಗುವ ಸಾಧ್ಯತೆ ಇದ್ದು, ವಿಶೇಷವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ರಸ್ತೆ ದುರಸ್ತಿ ಕಾರ್ಯವನ್ನು ತಕ್ಷಣ ಕೈಗೊಳ್ಳುವುದು ಅಗತ್ಯವಾಗಿದೆ ಎಂದು ಸಂಘ ಒತ್ತಿಹೇಳಿದೆ.
ಆದ್ದರಿಂದ ರಸ್ತೆಯಲ್ಲಿರುವ ಗುಂಡಿಗಳನ್ನು ತುರ್ತಾಗಿ ಮುಚ್ಚಿಸಿ, ಸಂಪೂರ್ಣ ರಸ್ತೆಯನ್ನು ಡಾಮರೀಕರಣಗೊಳಿಸಿ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸದರನ್ನು ಸಂಘ ಮನವಿ ಮಾಡಿದೆ.



























