ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಜೂನ್ 21ರಂದು ಮಂಗಳೂರಿನ ಎಕ್ಕೂರು ರಾಷ್ಟ್ರೀಯ ಹೆದ್ದಾರಿ 66ರ ರೈಲ್ವೆ ಮೇಲ್ಸೇತುವೆಯ ಮೇಲೆ ನಡೆದಿದೆ.
ಮೃತಪಟ್ಟ ಯುವಕನನ್ನು ಮಂಜೇಶ್ವರದ ಪಾತೂರುರಿನ ನಿವಾಸಿ ಸುಧೀಶ್ ಸಿ.ಕೆ.(26) ಎಂದು ಗುರುತಿಸಲಾಗಿದೆ. ಇವರು ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಭಾನುವಾರ ಬೆಳಿಗ್ಗೆ ಸುಧೀಶ್ ಅವರು ತಮ್ಮ ಮನೆಯಿಂದ ಕೆಲಸದ ನಿಮಿತ್ತ ನಗರಕ್ಕೆ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಲಭ್ಯವಿರುವ ಮಾಹಿತಿಯ ಪ್ರಕಾರ, ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಸುಧೀಶ್ ಅವರು ಚಲಾಯಿಸುತ್ತಿದ್ದ ಬೈಕ್, ತಮ್ಮ ಮುಂದೆಯೇ ಹೋಗುತ್ತಿದ್ದ ಲಾರಿಯ ಹಿಂಭಾಗಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸುಧೀಶ್ ಅವರ ತಲೆಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯರು ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದರಾದರೂ, ವಿಪರೀತ ರಕ್ತಸ್ರಾವದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.



























