ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಇತ್ತೀಚೆಗೆ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಪೋಷಕರು ಬಾಲಕಿಯನ್ನು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೂರಿನ ಪ್ರಕಾರ, ದೂರುದಾರರ ಸಂಬಂಧಿಕನಾಗಿರುವ ಒಬ್ಬ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಹಾಗೂ ಆತನ ಸ್ನೇಹಿತನಾದ ಮತ್ತೋರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಸೇರಿ 2023ರಲ್ಲಿ ಬೆಳ್ತಂಗಡಿ ಸಮೀಪದ ಡ್ಯಾಂವೊಂದರ ಬಳಿಯಿರುವ ಕಟ್ಟಡಕ್ಕೆ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದು, ಈ ವಿಷಯವನ್ನು ಯಾರಿಗೂ ತಿಳಿಸದಂತೆ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ.
ಈ ಕುರಿತು ಜೂನ್ 23, 2026ರಂದು ನೀಡಲಾದ ದೂರಿನ ಆಧಾರದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 376, 376ಎಬಿ, 376ಡಿಬಿ, 506 ಹಾಗೂ 34ರ ಜೊತೆಗೆ ಪೋಕ್ಸೋ ಕಾಯ್ದೆ-2012ರ ಕಲಂ 6ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



























