ಮಂಗಳೂರು, ಜೂನ್ 25: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA)ಯನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅಕ್ರಮ ಸಂಖ್ಯೆ 131/2026ರಡಿ ಎನ್‌ಡಿಪಿಎಸ್ ಕಾಯ್ದೆಯ 8(c) ಹಾಗೂ 22(C) ಕಲಂಗಳ ಅನ್ವಯ ಪ್ರಕರಣ ದಾಖಲಾಗಿದೆ.
ಬಂಧಿತ ಆರೋಪಿಯನ್ನು ಧನುಷ್ (29) ಎಂದು ಗುರುತಿಸಲಾಗಿದೆ. ಆತ ಯತೀಶ್ ಅವರ ಪುತ್ರನಾಗಿದ್ದು, ಸುರಕ್ಷಾ ನಗರ, ಕುಂಪಲ, ಮಂಗಳೂರು ನಿವಾಸಿಯಾಗಿದ್ದಾನೆ.
ಪೊಲೀಸರ ಮಾಹಿತಿ ಪ್ರಕಾರ, ಜೂನ್ 24ರಂದು ಬೋಳಾರದ ಮುಳಿಹಿತ್ಲು ಸಮೀಪ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎವನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ದಕ್ಷಿಣ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಕಾರ್ಯಾಚರಣೆಯ ವೇಳೆ ಆರೋಪಿಯಿಂದ 3.32 ಗ್ರಾಂ ಎಂಡಿಎಂಎ ಸೇರಿದಂತೆ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯನ್ನು ಬಂಧಿಸಿ, ಮುಂದಿನ ಕಾನೂನು ಕ್ರಮಕ್ಕಾಗಿ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



























